*ಅಲ್ಪಸಂಖ್ಯಾತರ ಯೋಜನೆಗಳ ಜಾಗೃತಿ ಮೂಡಿಸಲು ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಲ್ಪಸಂಖ್ಯಾತರ ಸಮುದಾಯಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಎಲ್ಲ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿ ಯೋಜನೆಗಳನ್ನು ಅನುಷ್ಠಾನಕ್ಕೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಅ.30) ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಚಟುವಟಿಗೆ ಇಲ್ಲದಿರುವ ಸರಕಾರಿ ಉರ್ದು ಶಾಲೆಗಳ ಮಾಹಿತಿಗಳನ್ನು ಕಲೆಹಾಕಿ, ಜಿಲ್ಲಾಡಳಿತದ ಗಮನಕ್ಕೆ ತಂದು ಅಂತಹ ಶಾಲೆಗಳನ್ನು ಮೌಲಾನಾ ಆಜಾದ ಶಾಲೆಗಳಾಗಿ ಪರಿವರ್ತನೆ ಮಾಡಬೇಕು ಎಂದರು.
ಅಲ್ಪಸಂಖ್ಯಾತರ ಸಮುದಾಯಗಳಿಗೆ ಇರುವಂತಹ ಮೌಲಾನಾ ಆಜಾದ ಯೋಜನೆ ಬಗ್ಗೆ ಅಲ್ಪ ಸಂಖ್ಯಾತ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ವಾರ್ಡಗಳಲ್ಲಿ ಇರುವಂತಹ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಅಗತ್ಯ ಮಾಹಿತಿ ನೀಡಿ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಬೇಕು. ಎಲ್ಲಾ ಇಲಾಖೆಗಳಲ್ಲಿರುವ ಅಲ್ಪಸಂಖ್ಯಾತ ವಿವಿಧ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಪ್ರಚಾರಪಡಿಸಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಪಸಂಖ್ಯಾತ ಮಕ್ಕಳ ಹಾಜರಾತಿ ಕಡ್ಡಾಯವಾಗಿ ಪರಿಶೀಲಿಸಬೇಕು. ಕುಡಿಯುವ ನೀರು, ಪುಷ್ಟಿ ಪೌಡರ ಹಾಗೂ ಮೊಟ್ಟೆಗಳ ವಿತರಣೆ ಕುರಿತು ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ಮೀನುಗಾರಿಕೆ, ತೋಟಗಾರಿಕೆ ಇಲಾಖೆ, ಕೈಗಾರಿಕಾ ತರಬೇತಿ ಸಂಸ್ಥೆ, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಇರುವಂತಹ ಯೋಜನೆಗಳ ಪ್ರಗತಿ ವರದಿ ಬಗ್ಗೆ ಇಲಾಖೆಯ ಅಧಿಕಾರಿಗಳು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಎಫ್.ಯು ಪೂಜೇರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ನಾಮ ನಿರ್ದೇಶಿತ ಸದಸ್ಯರುಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
 
					 
				 
					 
					 
					 
					
 
					 
					 
					


