Belagavi NewsBelgaum NewsKannada NewsKarnataka News

*ಎಸ್.ಸಿ-ಎಸ್.ಟಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ತ್ವರಿತವಾಗಿ ವಿಲೇವಾರಿಗೊಳಿಸಬೇಕು. ಎಸ್.ಸಿ-ಎಸ್.ಟಿ ದೌರ್ಜನ್ಯ ತಡೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಡಿ.31) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಆಸ್ಪತ್ರೆಗೆ ತುರ್ತು ಪರಿಸ್ಥಿಯಲ್ಲಿ ಚಿಕಿತ್ಸೆಗಾಗಿ ಬರುವ ಜನರಿಗೆ ಜಾತಿ ಪ್ರಮಾಣ ಪತ್ರ ಇಲ್ಲದೆ ಇದ್ದರೂ ಸಹ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ನೀಡಿ ತ್ವರಿತವಾಗಿ ಚಿಕಿತ್ಸೆ ಒದಗಿಸಬೇಕು ಎಂದು ಹೇಳಿದರು.

ನಗರದ ರಾಣಿ ಪಾರ್ವತಿ ದೇವಿ ರಸ್ತೆಯಲ್ಲಿರುವ (ಆರ್.ಪಿ.ಡಿ) ವೃತ್ತಕ್ಕೆ ರಾಜ ವೀರ ಮದಕರಿ ನಾಯಕರ ನಾಮಕರಣ ಮಾಡುವಂತೆ ಬಹಳಷ್ಟು ಬಾರಿ ಸಭೆಯಲ್ಲಿ ಚರ್ಚಿಸಲಾಗಿದೆ ಆದರೆ ಈಗಾಗಲೇ ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಆರ್.ಪಿ.ಡಿ ವೃತ್ತಕ್ಕೆ ಬೇರೆ ಹೆಸರು ನಾಮಕರಣ ಮಾಡಲು ಪ್ರಸ್ತಾಪಿಸಲಾಗಿದೆ. ಆದಕಾರಣ ಯಾವುದೇ ಅಡೆತಡೆಗಳಿಲ್ಲದಂತಹ ಬೇರೆ ವೃತ್ತಕ್ಕೆ ರಾಜ ವೀರ ಮದಕರಿ ನಾಯಕರ ಹೆಸರು ಗುರುತಿಸಬಹುದು ಎಂದು ಸಲಹೆ ನೀಡಿದರು.

Home add -Advt

ಬೆಳವಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಅದಷ್ಟು ಬೇಗ ಸಂಬಂಧಿಸಿದ ತಹಸೀಲ್ದಾರ್ ಸ್ಥಳೀಯರೊಂದಿಗೆ ಚರ್ಚಿಸಿ ವರದಿ ನೀಡಿದ ಬಳಿಕ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಎಂದು ಹೇಳಿದರು.

ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಬಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ ಸದಾಶಿವ ನಗರದಲ್ಲಿರುವ ಸ್ಮಶಾನ ಭೂಮಿ ನಿರ್ವಹಣೆಗೆ ತೊಂದರೆಯಾಗುತ್ತಿವ ಕಾರಣ ನಗರದ ಹೊರ ವಲಯದಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಸಾರ್ವಜನಿಕ ಸ್ಮಶಾನಕ್ಕೆ ಸೂಕ್ತ ಜಾಗೆ ಗುರುತಿಸಿ, ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಪ್ರಗತಿ ಪರಿಶೀಲನಾ ಸಭೆಗಿಂತ ಒಂದು ದಿನ ಮುಂಚಿತವಾಗಿ ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಭೆ ನಡೆಸಿ ಚರ್ಚಿಸಿ ವರದಿ ಸಿದ್ಧಪಡಿಸಿಕೊಳ್ಳುವುದು ಸೂಕ್ತ ಎಂದು ಜಿ.ಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.

ಸಮಾಜದ ಮುಖಂಡ ಮಲ್ಲೇಶ ಚೌಗಲಾ ಮಾತನಾಡಿ ಈಗಾಗಲೇ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೌರ್ಜನ್ಯ ನಿಯಂತ್ರಣ ಸಮಿತಿ ನಾಮನಿರ್ದೇಶತ ಸದಸ್ಯ ಕರೆಪ್ಪ ಗುಡೆನ್ನವರ ಮಾತನಾಡಿ ಅರಣ್ಯ ಇಲಾಖೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮತ್ತು ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಎಸ್.ಸಿ-ಎಸ್.ಟಿ ನೌಕರರಿಗೆ ನಿಯಮಾನುಸಾರ ಮುಂಬಡ್ತಿ ತಡವಾಗುತ್ತಿದೆ.

ಈ ವಿಷಯದ ಕುರಿತು ಸದನ ಸಮಿತಿಯಿಂದ ಈಗಾಗಲೇ ನಿರ್ದೇಶನ ಬಂದಿದೆ ಅದರಂತೆ ಕೂಡಲೇ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿಯಮಾನುಸಾರ ಮುಂಬಡ್ತಿಗೆ ಆದೇಶಿಸಬೇಕು ಎಂದು ವಿನಂತಿಸಿದರು.

ಮಜಗಾವಿ ಗ್ರಾಮಕ್ಕೆ ಹೋಗುವ ದಾರಿಯಲ್ಲಿ ರಸ್ತೆ ವಿಸ್ತೀರ್ಣ ಹೆಚ್ಚು ಇರುವುದರಿಂದ ರಾಜಾ ವೀರ ಮದಕರಿ ನಾಯಕರ ವೃತ್ತ ನಿರ್ಮಿಸಿ ಅವರ ಹೆಸರು ನಾಮಕರಣ ಮಾಡಬಹುದು ಆದರೆ ಸಮಾಜ ಮುಖಂಡರೊಂದಿಗೆ ಚರ್ಚಿಸಿ ಅಂತಿಮವಾಗಿ ತಿಳಿಸಲಾಗುವುದು ಎಂದು ದೌರ್ಜನ್ಯ ನಿಯಂತ್ರಣ ಸಮಿತಿ ನಾಮ ನಿರ್ದೇಶತ ಇನ್ನೋರ್ವ ಸದಸ್ಯ ವಿಜಯ ತಳವಾರ ಹೇಳಿದರು.

ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ, ದೌರ್ಜನ್ಯ ನಿಯಂತ್ರಣ ಸಮಿತಿ ನಾಮನಿರ್ದೇಶತ ಸದಸ್ಯ ಸಿದ್ದರಾಯ ಮೇತ್ರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದಿ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಕ್ರೀಡಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button