*ಡಿಸಿಸಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ರದ್ದು*: *ಅಭ್ಯರ್ಥಿಗಳ ಅರ್ಜಿ ಶುಲ್ಕ ಮರುಪಾವತಿಗೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಡಿಸಿಸಿ ಬ್ಯಾಂಕ್) 104 ಹುದ್ದೆಗಳ ನೇರ ನೇಮಕಾತಿಗಾಗಿ ಜುಲೈ 21ರಂದು ಪ್ರಕಟಿಸಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಸಿದ್ದ 21 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಸಂಗ್ರಹಿಸಿರುವ ಅಂದಾಜು ₹1.50 ಕೋಟಿ ಅರ್ಜಿ ಶುಲ್ಕವನ್ನು ಮರುಪಾವತಿಸುವಂತೆ ಆರ್ ಟಿ ಐ ಕಾರ್ಯಕರ್ತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಭೀಮಪ್ಪ ಗಡಾದ ಅವರು, ನೇಮಕಾತಿ ಅಧಿಸೂಚನೆಯನ್ನು ತಾಂತ್ರಿಕ ಲೋಪದೋಷಗಳ ಕಾರಣದಿಂದ ಸರ್ಕಾರವೇ ರದ್ದುಗೊಳಿಸಿರುವುದರಿಂದ, ಅಭ್ಯರ್ಥಿಗಳು ಪಾವತಿಸಿರುವ ಅರ್ಜಿ ಶುಲ್ಕವನ್ನು ಮರುಪಾವತಿಸುವುದು ಸರ್ಕಾರ ಅಥವಾ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿದೆ ಎಂದು ಒತ್ತಾಯಿಸಿದ್ದಾರೆ.
ವಿವಿಧ ಬ್ಯಾಂಕ್‌ಗಳು ಹಾಗೂ ಸರ್ಕಾರಿ ಸಂಸ್ಥೆಗಳು ನೇಮಕಾತಿ ಅಧಿಸೂಚನೆ ಹೊರಡಿಸಿದ ಬಳಿಕ ತಾಂತ್ರಿಕ ಅಥವಾ ಆಡಳಿತಾತ್ಮಕ ಕಾರಣಗಳಿಂದ ಅದನ್ನು ರದ್ದುಪಡಿಸಿ ಹೊಸ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ, ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಈಗಾಗಲೇ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳ ಹಣವನ್ನು ಮರುಪಾವತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಡಿಸಿಸಿ ಬ್ಯಾಂಕ್‌ನಿಂದ ಜುಲೈ 21ರಂದು ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಯಲ್ಲಿ ಸುಮಾರು ಒಂಬತ್ತು ಬಗೆಯ ಲೋಪದೋಷಗಳಿರುವುದು ಕೆಳಹಂತದ ಅಧಿಕಾರಿಗಳ ವರದಿಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ, ಆಗಸ್ಟ್ 25ರಂದು ಅಧಿಸೂಚನೆಯನ್ನು ರದ್ದುಪಡಿಸುವಂತೆ ಸಹಕಾರ ಸಂಘಗಳ ನಿಬಂಧಕರು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದರ ನಡುವೆ, ಮುಂದಿನ ನೇಮಕಾತಿ ಅಧಿಸೂಚನೆ ಹೊರಡಿಸಿದರೂ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹಳೆಯ ಅರ್ಜಿಗಳನ್ನೇ ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು ಎಂದು ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರೂ, ಮಾಜಿ ಲೋಕಸಭಾ ಸದಸ್ಯರೂ ಆಗಿರುವ ಜೊಲ್ಲೆ ಅವರು ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಹೊಸ ಅಧಿಸೂಚನೆ ಹೊರಬಂದ ಸಂದರ್ಭದಲ್ಲಿ ಹಿಂದಿನ ಅರ್ಜಿಗಳನ್ನೇ ಪರಿಗಣಿಸಲಾಗುತ್ತದೆಯೇ ಅಥವಾ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬೇಕೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಅಭ್ಯರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಯಾವ ನಿಯಮಗಳು ಮತ್ತು ಕಾನೂನುಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ ಎಂಬುದನ್ನು ಸರ್ಕಾರವೇ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಭೀಮಪ್ಪ ಗುಂ ಗಡಾದ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಅಲ್ಲದೆ, ಅರ್ಜಿ ಶುಲ್ಕವನ್ನು ಮರುಪಾವತಿಸದಿದ್ದಲ್ಲಿ, ಇದನ್ನು ಸೇವೆಯಲ್ಲಿನ ನ್ಯೂನತೆ ಎಂದು ಪರಿಗಣಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬ ಅಂಶವನ್ನೂ ಸರ್ಕಾರಕ್ಕೆ ಸಲ್ಲಿಸಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.



