ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಏಪ್ರಿಲ್ 20ರ ಬಳಿಕ ಐಟಿ-ಬಿಟಿ ಕ್ಷೇತ್ರದ ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ಇರುತ್ತದೆ ಎಂದು ಐಟಿ, ಬಿಟಿ ಸಚಿವರೂ ಆಗಿರುವ ಡಿಸಿಎಂ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ- ಬಿಟಿ ಸಿಬ್ಬಂದಿಗೆ ಪಾಸ್, ಸಂಪರ್ಕ ಸಾರಿಗೆ ವ್ಯವಸ್ಥೆ, ಸ್ಕ್ರೀನಿಂಗ್, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಐಟಿ-ಬಿಟಿ ಮುಖ್ಯಸ್ಥರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಲಾಗಿದೆ. ಲಾಕ್‌ಡೌನ್‌ನಿಂದಾಗಿ ಐಟಿ- ಬಿಟಿ ಕ್ಷೇತ್ರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಕೆಲವರಿಗೆ ವರ್ಕ್‌ಫ್ರಂಮ್ ಹೋಂಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಲಾಕ್‌ಡೌನ್‌ಗೆ ಏಪ್ರಿಲ್ 20 ರಿಂದ ತಕ್ಕಮಟ್ಟಿನ ವಿನಾಯಿತಿ ಇರುವುದರಿಂದ ಐಟಿ- ಬಿಟಿ ಕ್ಷೇತ್ರದಲ್ಲಿ ಸಿಬ್ಬಂದಿಗೆ ಕೆಲಸ ಮಾಡಲು ಅವಕಾಶ ಕಲ್ಪಸಲಾಗಿದೆ ಎಂದರು.
ಐಟಿ -ಬಿಟಿ ಕ್ಷೇತ್ರದಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಯಾವುದೇ ರೀತಿಯಲ್ಲಿ ಉದ್ಯೋಗ ಕಡಿತ ಮಾಡಬಾರದು ಎಂದು ಸೂಚಿಸಲಾಗಿದೆ. ಯಾವುದೇ ಹೊಸ ಕೆಲಸದ ಆರ್ಡರ್ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಂಪನಿ ಬಾಗಿಲು ಹಾಕುವುದು, ಅಥವಾ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಸರಿ ಅಲ್ಲ. ಏಕೆಂದರೆ ಈಗ ಹೊಸ ಕೆಲಸ ಹುಡುಕಿಕೊಳ್ಳುವುದು ಕಷ್ಟವಾಗುತ್ತದೆ. ಕಂಪನಿ ಮುಚ್ಚುವ ಬದಲು ಸಂಬಳ ಕಡಿತ ಮುಂತಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಎಲ್ಲ ಕಂಪನಿಗಳು ಇದೇ ನಿಯಮ ಪಾಲಿಸಬೇಕು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ