ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಇಂದು ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಮೇ 24ರವರೆಗೆ ಲಾಕ್ ಡೌನ್ ಜಾರಿಯಿರುವುದರಿಂದ ಈಗಲೇ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಕೊರೊನಾ ಪ್ರಕರಣಗಳನ್ನು ಗಮನಿಸಿ ಮುಂದಿನ ದಿನಗಳಲ್ಲಿ ತೀರ್ಮಾನಿಸುವ ಬಗ್ಗೆ ನಿರ್ಧರಿಸಲಾಗಿದೆ ಎನ್ನಲಾಗಿದೆ.
ಡಿಸಿಎಂ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಈ ಬಗ್ಗೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ್, 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಮೊದಲ ಡೋಸ್ ನೀಡಲು ಹಾಗೂ ಸಧ್ಯಕ್ಕೆ ಕೋವ್ಯಾಕ್ಸಿನ್ 2ನೇ ಡೋಸ್ ಮಾತ್ರ ನೀಡಲು ನಿರ್ಧರಿಸಲಾಗಿದೆ. ಮೊದಲ ಡೋಸ್ ಪಡೆದ 6 ವಾರದ ಬಳಿಕ 2ನೇ ಡೋಸ್ ನೀಡಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಗಳಿಂದ ಹೊರಗೆ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಶಾಲಾ-ಕಾಲೇಜುಗಳಲ್ಲಿಯೂ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಮೆಡಿಕಲ್ ತ್ಯಾಜ್ಯ ವಿಲೇವಾರಿಗೆ ಪ್ರತಿ ಬೆಡ್ ಗೆ 10 ರೂ ನಿಗದಿ ಮಾಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರದ ಕೊಳಗೇರಿ ಪ್ರದೇಶಗಳಲ್ಲಿ ಹೋಂ ಐಸೋಲೇಷನ್ ಮಾಡದಿರಲು ನಿರ್ಧರಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಾಸ್ಟೆಲ್ ಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ಖಾಸಗಿ ವೈದ್ಯರು ಸಲಹೆ ನೀಡಿದ ಸೋಂಕಿತರಿಗೂ ಸರ್ಕಾರಿ ಮೆಡಿಕಲ್ ಕಿಟ್ ವಿತರಿಸಲು ನಿರ್ಧರಿಸಲಾಗಿದೆ. ಅಲ್ಲದೇ ಇನ್ಮುಂದೆ ಕೊರೊನಾ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗುತ್ತಿರುವುದರಿಂದ ಇಂಜಕ್ಷನ್ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ವಾರಕ್ಕೆ 20 ಸಾವಿರ ವಯಲ್ಸ್ ಗೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಲಾಕ್ ಡೌನ್ ವಿಸ್ತರಣೆ; ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ