
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾನು ರಾಜ್ಯಪಾಲರನ್ನು ಭೇಟಿಯಾಗಿದ್ದು ಹಾಗೂ ದೆಹಲಿಗೆ ಆಗಮಿಸಿರುವುದು ಎರಡೂ ಕಾಕತಾಳೀಯ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಮುಂದಿನ ಮೂರು ವರ್ಷ ಕಾಲ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವ ಬದಲಾವಣೆಯೂ ಇಲ್ಲ, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಲಿದ್ದಾರೆ ಎಂದರು.
ಸಾರಿಗೆ ಇಲಾಖೆಯ ಕೆಲಸಗಳ ಹಿನ್ನಲೆಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೆ. ಇದನ್ನು ಕಾರ್ಯಕರ್ತರು ತಪ್ಪಾಗಿ ಭಾವಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆಯದೇ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದರು.
ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಿಹಿ ಹಂಚಿ ಅಭಿನಂದಿಸಿದ್ದೇನೆ. ಇನ್ನು ನಾನು ರಾಜ್ಯಪಾಲರನ್ನು ಭೇಟಿಯಾಗಿದ್ದು ಅವರ ಆರೋಗ್ಯ ವಿಚಾರಿಸಲು. ಹೊರತು ಯಾವುದೇ ರಾಜಕೀಯ ಚರ್ಚೆ ನಡೆಸಲು ಅಲ್ಲ ಎಂದು ತಿಳಿಸಿದರು.