Latest

ಪಂಚಮಸಾಲಿ ಮೀಸಲಿಗೆ ನನ್ನ ಬೆಂಬಲವಿದೆ: ಡಿಸಿಎಂ ಸವದಿ ಸ್ಪಷ್ಟೀಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟದ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ವಿಚಾರಕ್ಕೆ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತ: ಡಿಸಿಎಂ ಸವದಿ ಸ್ಪಷ್ಟೀಕರಣ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಸಿಎಂ ಸವದಿ, ನನ್ನ ವಿರುದ್ಧ ಸಮಾಜದಲ್ಲಿ ತಪ್ಪು ಭಾವನೆ ಸೃಷ್ಟಿಸಬೇಕೆಂಬ ದುರುದ್ದೇಶದಿಂದ ಸತ್ಯಕ್ಕೆ ದೂರವಾದ ಈ ಸಂಗತಿಯನ್ನು ಮಾಧ್ಯಮಗಳಿಗೆ ನೀಡಿ ಅಪಪ್ರಚಾರ ಕೈಗೊಂಡಿದ್ದಾರೆ. ನಾನು ಮೊದಲಿನಿಂದಲೂ ಪಂಚಮಸಾಲಿಗೆ ಮೀಸಲು ನೀಡಬೇಕೆಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ. ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪರಮಪೂಜ್ಯ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಯವರು ನಡೆಸಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ (ಕಳೆದ ಅಕ್ಟೋಬರ್ ನಲ್ಲಿ) ನಾನೂ ಕೂಡ ಭೇಟಿಕೊಟ್ಟು ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅವರಿಗೆ ಬೆಂಬಲ ಸೂಚಿಸಿ ಆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿಕೊಂಡು ಶ್ರೀಗಳಿಗೆ ಎಳೆನೀರನ್ನು ಸೇವಿಸಲು ವಿನಂತಿಸಿಕೊಂಡಿದ್ದೆ. ಅದರಂತೆ ಶ್ರೀಗಳು ಅಂದು ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದರು ಎಂಬುದು ಎಲ್ಲಾ ಮಾಧ್ಯಮಗಳಲ್ಲೂ ವರದಿಯಾಗಿತ್ತು. ವಾಸ್ತವ ಸ್ಥಿತಿ ಹೀಗಿರುವಾಗ ನಾನು ಇದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಮೊದಲಿನಿಂದಲೂ ನಾನು ಅನೇಕ ಸಂದರ್ಭಗಳಲ್ಲಿ ಪಂಚಮಸಾಲಿ ಸಮುದಾಯವು 2ಎ ಗೆ ಸೇರಬೇಕು ಎಂದು ಪ್ರತಿಪಾದಿಸುತ್ತಿದ್ದೇನೆ. ಅಷ್ಟೇಅಲ್ಲ, ನಮ್ಮ ಸರ್ಕಾರವೂ ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಈ ದಿಶೆಯಲ್ಲಿ ಗಂಭೀರ ಪರಾಮರ್ಶೆ ನಡೆಸುತ್ತಿದೆ. ಆದಾಗ್ಯೂ ನನ್ನ ವಿರುದ್ಧ ಅನವಶ್ಯಕವಾಗಿ ಇಲ್ಲಸಲ್ಲದ ಅಭಿಪ್ರಾಯಗಳನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ಪ್ರಯತ್ನಿಸುತ್ತಿರುವ ಕಾಣದ ಕೈಗಳ ಕುತಂತ್ರವನ್ನು ನಂಬಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button