
ಪ್ರಗತಿವಾಹಿನಿ ಸುದ್ದಿ: ತಾಪಮಾನ ಹೆಚ್ಚುತ್ತಿದ್ದಂತೆ ಬೆಂಕಿ ಅವಘಡಗಳೂ ಹೆಚ್ಚುತ್ತಿವೆ. ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಪಕ್ಕದಲ್ಲಿದ್ದ ಗುಡಿಸಲುಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ ಪರಿಣಾಮ ಮಗು ಸೇರಿ ಮೂವರು ಸಜೀವದಹನಗೊಂಡಿರುವ ಘಟನೆ ನಡೆದಿದೆ.
ದೆಹಲಿಯ ರೋಹಿಣಿ ಪ್ರದೇಶದಲ್ಲಿ ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲಿ ಪಕ್ಕದಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳಿಗೂ ಬೆಂಕಿ ಆವರಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ.
ಬೆಳಗಿನ ಜಾವ ಸುಮಾರು 1.25 ರ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಪ್ಲಾಸ್ಟಿಕ್ ವಸ್ತುಗಳಿಗೆ ತಗುಲಿದ ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿಕೊಂಡಿವೆ.
ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ. ಅವಶೇಶಗಳಡಿ ಸಿಲುಕಿ ಗಾಯಗೊಂದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




