
ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ತೀವ್ರಗೊಳಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ದರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ರೈತರು, ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಜಿಲ್ಲೆಯ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹತ್ತರಗಿ, ಕುಗನೊಳ್ಳಿ ಮತ್ತು ಹಿರೇಬಾಗೇವಾಡಿ ಟೋಲ್ ಗೇಟ್ಗಳ ಬಳಿ ಸಾವಿರಾರು ರೈತರು ಜಮಾಯಿಸಿ ಹೆದ್ದಾರಿಯಲ್ಲೇ ಧರಣಿ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಊಟ ಮಾಡಿದ ರೈತರು, ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ. ಹಿರೇಬಾಗೇವಾಡಿ ಬಳಿ ನೂರಾರು ಟ್ರಕ್ಗಳು ಹಾಗೂ ಖಾಸಗಿ ವಾಹನಗಳು ಕಿಲೋಮೀಟರ್ಗಟ್ಟಲೆ ಸಾಲುಗಟ್ಟಿ ನಿಂತಿವೆ.
ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಸಂಚರಿಸಲು ಯತ್ನಿಸಿದ ಗುಜರಾತ್ ಟ್ರಾವೆಲ್ಸ್ ಬಸ್ ಸೇರಿದಂತೆ ಹಲವು ವಾಹನಗಳನ್ನು ಪ್ರತಿಭಟನಾಕಾರರು ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವೇಳೆ ಹುಕ್ಕೇರಿ ಟೋಲ್ ನಾಕಾ ಬಳಿ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಯುವ ರೈತನೊಬ್ಬ ಟೋಲ್ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ತಕ್ಷಣ ಆತನನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಗೇಟ್ ಬಳಿಯೂ ರೈತರು ರಾಷ್ಟ್ರೀಯ ಹೆದ್ದಾರಿ 48 ತಡೆದು ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲೇ ಅಡುಗೆ ಮಾಡಿ ಊಟ ಮಾಡಿದ ಬಳಿಕ ಟ್ರ್ಯಾಕ್ಟರ್ಗಳ ಮೇಲೆ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಾರುಕೋಲು ಚಳವಳಿ ಹಾಗೂ ಭಜನೆ ನಡೆಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಧಾರವಾಡ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿಯೂ ರೈತರು ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಧರಣಿ ನಡೆಸಿದ್ದಾರೆ. 11 ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು, ರೋಗಿಗಳು ಹಾಗೂ ಸರಕು ಸಾಗಣೆ ವಾಹನಗಳ ಚಾಲಕರು ತೊಂದರೆ ಅನುಭವಿಸಿದ್ದಾರೆ.
ಕಲಬುರಗಿ ನಗರದ ರಾಮ ಮಂದಿರ ವೃತ್ತದಲ್ಲಿಯೂ ರೈತರು ಅಹೋರಾತ್ರಿ ಜಾಗರಣೆ ನಡೆಸಿ ಬೀದರ್–ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ತಡೆದಿದ್ದಾರೆ. ರಸ್ತೆಯಲ್ಲೇ ಮಲಗಿ, ಭಜನೆ ಮಾಡುವ ಮೂಲಕ ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರೈತರ ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ದರ ನಿಗದಿಪಡಿಸುವುದು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸುವುದು, ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಖರೀದಿಸುವುದು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು ಸೇರಿವೆ.
ಸರ್ಕಾರಗಳು ಕೂಡಲೇ ಮಧ್ಯಪ್ರವೇಶಿಸಿ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡುವುದಾಗಿ ರೈತ ಸಂಘಟನೆಗಳು ಎಚ್ಚರಿಸಿವೆ. ಕಬ್ಬಿನ ಬೆಲೆ ವಿಚಾರವಾಗಿ ಆರಂಭವಾಗಿರುವ ಈ ಪ್ರತಿಭಟನೆ ಇದೀಗ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ವ್ಯತ್ಯಯಕ್ಕೆ ಕಾರಣವಾಗಿದ್ದು, ಸರ್ಕಾರದ ಮುಂದಿನ ಕ್ರಮದತ್ತ ರೈತರು ಕಾಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




