Kannada NewsKarnataka NewsLatestPolitics

*ಡೆಂಘಿ ಪ್ರಕರಣ ಹೆಚ್ಚಳ; ಸಾಂಕ್ರಾಮಿಕ ರೋಗ ತಡೆಗಟ್ಟಲು ಒತ್ತು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು ಆರು ಜನ ಸತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಇತ್ತೀಚೆಗೆ ಡೆಂಘಿ ಜ್ವರ ಜಾಸ್ತಿ ಆಗಿದೆ. ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಈ ಸಾಂಕ್ರಾಮಿಕ ತಡೆಗಟ್ಟಲು ಒತ್ತು ನೀಡಬೇಕು ಎಂದು ತಿಳಿಸಿದರು.

ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು. ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು. ಗೊಬ್ಬರವನ್ನು ಎಂ.ಆರ್.ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಒಟ್ಟಾರೆಯಾಗಿ ನಿಮ್ಮ ವೈಫಲ್ಯದಿಂದ ಜನರ ನಿರೀಕ್ಷೆ ಹುಸಿಯಾಗಬಾರದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನಗಿದೆ ಎಂದರು.

ಹೊಸ ಸರ್ಕಾರದ ಇಚ್ಛೆ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಸರ್ಕಾರ ಇದರಲ್ಲಿ ಮುಂದೆ ಇದೆ. ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ.ಈಗ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಐದನೇ ಗ್ಯಾರಂಟಿಯನ್ನು ಮುಂದಿನ ವರ್ಷ ಜನವರಿಯಿಂದ ಪ್ರಾರಂಭ ಮಾಡಲು ಉದ್ದೇಶಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಹಣದ ತೊಂದರೆ ಇಲ್ಲ. ಇದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳಿಗೆ ಅನಗತ್ಯವಾಗಿ ಶಿಕ್ಷೆ ನೀಡುವುದಿಲ್ಲ. ಆದರೆ ತಪ್ಪು ಮಾಡಿದರೆ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು

ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೇ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು; ಯಾವ ಧರ್ಮದವರಿಗೂ ತೊಂದರೆಯಾಗಬಾರದು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button