
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ, ಆರೋಗ್ಯ ಇಲಾಖೆ ಅಧಿಕರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಒ,ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದರು.
ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ