*ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*

ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಲಾಖೆಯ ಯೋಜನೆಗಳನ್ನು ತಪ್ಪದೇ ಅನುಷ್ಠಾನಕ್ಕೆ ತರಬೇಕು. ಇಲಾಖೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದರು.
ಬೆಂಗಳೂರಿನ ಬಾಲಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಮಟ್ಟದಲ್ಲಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ ಸಂಬಂಧ ಈಗಾಗಲೇ ಬೌತಿಕವಾಗಿ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಇರುವುದನ್ನು ಅನುಷ್ಠಾನಗೊಳಿಸಲು ಸಚಿವರು ಸೂಚಿಸಿದರು. ಅಂಗನವಾಡಿ ಫಲಾನುಭವಿಗಳಾದ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಮಾತೃಪೂರ್ಣ ಯೋಜನೆಯ ಸೌಲಭ್ಯವನ್ನು ಅವರ ಮನೆಗಳಿಗೆ ತಲುಪಲು (THR) ಕ್ರಮವಹಿಸಿ, ಅದರ ಸಾಧಕ ಬಾದಕಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ.ಎಸ್.ಅರ್ಚನಾ, ಜಂಟಿ ನಿರ್ದೇಶಕರಾದ ಡಾ.ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಕೃತಜ್ಞತೆ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಜೊತೆಗೆ ಗೃಹಲಕ್ಷ್ಮಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ ಆಗುವವರೆಗೂ ಅಧಿಕಾರಿಗಳು ನಿಗಾವಹಿಸಬೇಕೆಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ