*ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ ಎಂದರು.
ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಜಾರಿ ಮಾಡಿದರು ಎಂದು ವಿವರಿಸಿದರು.
ದೇವರಾಜಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಕಾನೂನನ್ನು ಬಿಜೆಪಿ ಯವರು ಉಲ್ಟಾ ಮಾಡಿ ಉಳ್ಳವನೇ ಭೂ ಒಡೆಯ ಎಂದು ಬದಲಾಯಿಸಿಬಿಟ್ಟಿದ್ದಾರೆ. ಇದಕ್ಕಾಗಿ ಸಂವಿಧಾನ 79 (a), (b) ವನ್ನೇ ರದ್ದುಪಡಿಸಿದ್ದಾರೆ ಎಂದು ಟೀಕಿಸಿದರು.
ಸಂವಿಧಾನ ವಿರೋಧಿಗಳಿಗೆ, ಬಡವ-ಮಧ್ಯಮ ವರ್ಗದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ದೇವರಾಜ ಅರಸರು ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಎದೆಗಾರಿಕೆಯಿಂದ ಹಾವನೂರು ವರದಿ ಜಾರಿ ಮೀಡಿದ್ದು ಅರಸು ಅವರು ಎಂದು ಮೆಚ್ಚುಗೆ ಸೂಚಿಸಿದರು.
ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ಷೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ