*ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಂದ ಭುಗಿಲೆದ್ದ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಧಾರವಾಡದಲ್ಲಿ ನಿರುದ್ಯೋಗಿಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ಧಾರವಾಡದ ಶ್ರೀನಗರ ವೃತ್ತದಲ್ಲಿ ಕಾಂಗ್ರೆಸ್ ನಾಯಕರ ಭಿತ್ತಿ ಪತ್ರಗಳನ್ನು ಕೈಯಲ್ಲಿ ಹಿದಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಸುಮಾರು 20 ಸಾವಿರ ಯುವಜನತೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಉದ್ಯೋಗ ನೀಡುತ್ತಿಲ್ಲ. ಅಧಿಸೂಚನೆಯನ್ನೂ ಹೊರಡಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದು, ಬಿಜೆಪಿ ಕಾರ್ಯಕರ್ತರು, ನಾಯಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಉದ್ಯೋಗಾಕಾಂಕ್ಷಿಗಳ ಆಕ್ರೋಶ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.




