*ಬಿಗ್ ಬಾಸ್ ಸ್ಪರ್ಧಿ ರಜತ್ ಬೈಟ್ ತೆಗೆದುಕೊಳ್ಳುವಾಗ ಯೂಟ್ಯೂಬರ್ ಗಳ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಧರ್ಮಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮೂವರು ಯೂಟ್ಯೂಬರ್ ಗಳ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ಪಾಂಗಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಭೇಟಿ ನೀಡಿದ್ದ ವೇಳೆ ಯೂಟ್ಯೂಬರ್ ಗಳು ರಜತ್ ಬೈಟ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಗುಂಪೊಂದು ಉದ್ರಿಕ್ತಗೊಂಡು ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದೆ. ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಘಟನಾ ಸ್ಥಳದಲ್ಲಿದ್ದ ವಾಹನಗಳ ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ.
ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಇನ್ನೊಂದೆಡೆ ಹಲ್ಲೆಗೊಳಗಾದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.