ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ 6 ಜನರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧೋರ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸೇರಿದಂತೆ 6 ಜನನರು ಅಪರಾಧಿಗಳಾಗಿದ್ದು, ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಅಲ್ಲದೇ ತಲಾ 5 ಸಾವಿರ ರುಪಾಯಿ ದಂಡ ವಿಧಿಸಿದೆ. 2011ರಲ್ಲಿ ಉಜ್ಜಯನಿಯಲ್ಲಿ ಬಿಜೆ ಎಂ (ಭಾರತೀಯ ಜನತಾ ಯುವ ಮೋರ್ಚಾ) ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಘರ್ಷ ಏರ್ಪಟ್ಟಿತ್ತು.
ಜೈಲುಶಿಕ್ಷೆ ಪ್ರಕಟವಾಗುತ್ತಿದ್ದಂತೆ ದಿಗ್ವಿಜಯ್ ಸಿಂಗ್, ಶಿಕ್ಷೆಗೆ ತಡೆ ಕೋರಿ ಜಾಮೀನು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲಯ 25 ಸಾವಿರ ರೂಪಾಯಿ ಬಾಂಡ್ ನೊಂದಿಗೆ ಜಾಮೀನು ಮಂಜೂರು ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದಿಗ್ವಿಜಯ್ ಸಿಂಗ್, ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ನನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕೂಡ ಸುಳ್ಳು. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಆರೋಪ ಪಟ್ಟಿಯಲ್ಲಿ ನನ್ನ ಹೆಸರು ಸೇರಿದ್ದಾರೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ