ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಐರಾವತ ಯೋಜನೆಯಡಿ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ ನಾಯಕ ಅವರು ಶನಿವಾರ (ಅ.19) ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫಲಾನುಭವಿಗಳಿಗೆ ಟ್ಯಾಕ್ಸಿಗಳನ್ನು ಹಸ್ತಾಂತರಿಸಲಾಯಿತು.
ಐರಾವತ ಯೋಜನೆಯಡಿ 48 ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 14 ಜನ ಫಲಾನುಭವಿಗಳ ಪೈಕಿ ಕೆಲವರಿಗೆ ಸಾಂಕೇತಿಕವಾಗಿ ಟ್ಯಾಕ್ಸಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ ನಾಯಕ ಅವರು, ಉದ್ಯಮಶೀಲತಾ ಯೋಜನೆಯಡಿ ಬೊಲೇರೋ, ಆಟೋರಿಕ್ಷಾ ಮತ್ತಿತರ ಲಘುವಾಹನಗಳನ್ನೂ ಮಂಜೂರು ಮಾಡಲಾಗುತ್ತಿದೆ ಎಂದರು.
ಐರಾವತ ಯೋಜನೆಯಡಿ ಸರ್ಕಾರದ ವತಿಯಿಂದ ಐದು ಲಕ್ಷ ರೂಪಾಯಿವರೆಗೆ ಸಹಾಯಧನ ನೀಡುವುದರಿಂದ ಫಲಾನುಭವಿಗಳಿಗೆ ಅನುಕೂಲವಾಗುತ್ತಿದೆ.
ಉಬರ್, ಓಲಾದಂತಹ ಕಂಪನಿಗಳ ಸಹಯೋಗದೊಂದಿಗೆ ಫಲಾನುಭವಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಹೇಳಿದರು.
ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಂಬೇಡ್ಕರ್ ಅಭಿವೃದ್ಧಿ ನಿಗಮದ ಉಪ ಪ್ರಧಾನ ವ್ಯವಸ್ಥಾಪಕರಾದ ಪ್ರಕಾಶ್ ಹರಗಾಪುರ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ