ಬರ-ಪ್ರವಾಹ ನಿರ್ವಹಣೆ: ಅಧಿಕಾರಿಗಳ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕುಡಿಯುವ ನೀರಿನ ತೊಂದರೆ ಹಾಗೂ ಮುಂಗಾರು ವಿಳಂಬ ಒಂದೆಡೆಯಾದರೆ ನದಿತೀರದ ಗ್ರಾಮಗಳಲ್ಲಿ ಸಂಭವನೀಯ ಪ್ರವಾಹ ಭೀತಿ ಇನ್ನೊಂದೆಡೆ ಇದೆ. ಈ ಎರಡೂ ವಿಭಿನ್ನ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ಸೋಮವಾರ(ಜೂ.12) ನಡೆದ ಕುಡಿಯುವ ನೀರು ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದ ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಗ್ರಾಮಗಳಲ್ಲಿ ಜನರಿಗೆ ನೀರು ಪೂರೈಸುವ ನಿಟ್ಟಿನಲ್ಲಿ ಆಯಾ ಪಿಡಿಓ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು.
ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಇದಲ್ಲದೇ ಅವಕಾಶ ಇರುವ ಕಡೆಗಳಲ್ಲಿ ಕೊಳವೆ ಬಾವಿ ದುರಸ್ತಿ ಮಾಡಬೇಕು. ಯಾವುದೇ ಕಾರಣಕ್ಕೂ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು ಎಂದರು.
ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನದಿ ತೀರದ ಗ್ರಾಮಗಳಲ್ಲಿ ನಿಗಾ ವಹಿಸಬೇಕು. ತುರ್ತು ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳ ಪ್ರಾಣರಕ್ಷಣಗೆ ಅಗತ್ಯವಿರುವ ಬೋಟ್, ಜೀವರಕ್ಷಕ ಜಾಕೆಟ್ ಮತ್ತಿತರ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಪ್ರತಿಯೊಂದು ತಾಲ್ಲೂಕಿನ ನೋಡಲ್ ಅಧಿಕಾರಿಗಳು ಕಂದಾಯ, ಪೊಲೀಸ್, ಕೃಷಿ, ಪಶು ವೈದ್ಯಕೀಯ, ಆರೋಗ್ಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜತೆ ಸಮನ್ವಯ ಸಾಗಿಸಿಕೊಂಡು ಪರಿಣಾಮಕಾರಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಇತ್ತೀಚಿಗೆ ಸಿಡಿಲು ಬಡಿದು ಪ್ರಾಣಹಾನಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಡಿಲಿನಿಂದ ರಕ್ಷಿಸಿಕೊಳ್ಳುವ ವಿಧಾನಗಳು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಮಾಂಜರಿಗೆ ಭೇಟಿ-ಜಿಪಿಎಸ್ ಅಭಿಯಾನ ಪರಿಶೀಲನೆ:
ಪ್ರವಾಹ ಸಂದರ್ಭದಲ್ಲಿ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಮನೆಗಳ ನಿರ್ಮಾಣಕ್ಕಾಗಿ ಮೊದಲ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿರುತ್ತದೆ.
ಅಂತಹ ಫಲಾನುಭವಿಗಳ ಮನೆ ನಿರ್ಮಾಣದ ವಿವಿಧ ಹಂತಗಳನ್ನು ಜಿಪಿಎಸ್ ಮಾಡುವ ಕೆಲಸವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಕೆಲವು ಕಡೆಗಳಲ್ಲಿ ಬಾಕಿ ಉಳಿದಿರುವ ಜಿಪಿಎಸ್ ಕೆಲಸವನ್ನು ಅಭಿಯಾನದ ರೂಪದಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವತಃ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮನೆ ನಿರ್ಮಾಣ ಕಾಮಗಾರಿಯ ಜಿಪಿಎಸ್ ಪ್ರಗತಿಯನ್ನು ಪರಿಶೀಲಿಸಿದರು.
ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವುದರ ಜತೆಗೆ ಮುಂದಿನ ಕಂತು ಬಿಡುಗಡೆಗೆ ಜಿಪಿಎಸ್ ಕಡ್ಡಾಯವಾಗಿರುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಜಿಪಿಎಸ್ ಮಾಡುವುದನ್ನು ಬಾಕಿ ಇಡದಂತೆ ಅಧಿಕಾರಿಗಳಿಗೆ ತಿಳಿಸಿದರು.
ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ, ಚಿಕ್ಕೋಡಿ ಉಪ ವಿಭಾಗದ ತಹಶೀಲ್ದಾರರು, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಚಿಕ್ಕೋಡಿ-ನಿಪ್ಪಾಣಿ ತಾಲ್ಲೂಕುಗಳಿಗೆ ಸಂಬಂಧಿಸಿದ ಸಭೆಯ ಬಳಿಕ ರಾಯಬಾಗ ತಾಲ್ಲೂಕಿನ ಅಧಿಕಾರಿಗಳ ಸಭೆಯನ್ನು ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಸಂಭವನೀಯ ಪ್ರವಾಹ ನಿರ್ವಹಣೆ, ಬಿತ್ತನೆ ಬೀಜಗಳ ಸಮರ್ಪಕ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ