Kannada NewsKarnataka NewsLatestPolitics

*ದರ ಏರಿಕೆ ಪ್ರತಿಭಟನೆಗೆ ಡಿಕೆಶಿ ಕೌಂಟರ್*: *ಮೊದಲು ಎಥೆನಾಲ್ ಬಗ್ಗೆ ಉತ್ತರಿಸಿ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸ ವಿಚಾರ ಪ್ರಸ್ತಾಪಿಸಿದ್ದಾರೆ. ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದಿಂದ ವಾಹನ ಮಾಲೀಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ಮೊದಲು ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ.

ಮೈಸೂರಿನ ಮಂಡಹಳ್ಳಿ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನದಲ್ಲಿ ಎಥೆನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ. ಎಂಜಿನ್‌ಗಳಿಗೆ ಹಾನಿಯಾಗುತ್ತಿದ್ದು, ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿವೆ. ಇದರಿಂದ ವಾಹನ ಮಾಲೀಕರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ.20ರಿಂದ 30ಕ್ಕೆ ಹೆಚ್ಚಿಸಲಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಇದರಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದಾರೆ.

ಈ ಸಂಬಂಧ 67 ಸ್ಥಳಗಳಿಂದ ಇಂಧನದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ವಿಚಾರವನ್ನು ಪರಿಶೀಲನೆಗಾಗಿ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಎಥೆನಾಲ್ ಮಿಶ್ರಣದಿಂದ ವಾಹನಗಳ ಬಳಕೆಯ ಅವಧಿ ಕಡಿಮೆಯಾಗುತ್ತಿದೆ ಎಂಬ ಆತಂಕವೂ ವಾಹನ ಮಾಲೀಕರಲ್ಲಿದೆ. ಈ ಸಮಸ್ಯೆ ದೇಶಾದ್ಯಂತ ಪರಿಣಾಮ ಬೀರುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.

Related Articles

Back to top button