
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಲ್ಪಸಂಖ್ಯಾತರಿಗೆ ಕೋಟಾ ನೀಡಲು ಸಂವಿಧಾನದಲ್ಲಿ ಕೆಲ ಬದಲಾವಣೆ ಮಾಡಲಾಗುವುದು ಎಂದು ಹೇಳಿ ಈಗ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷ ಮತ್ತು ಡಿ.ಕೆ ಶಿವಕುಮಾರ್ ಇಂತಹ ಹೇಳಿಕೆಗಾಗಿ ಕ್ಷಮೆಯಾಚಿಸಬೇಕು. ಅವರು ತಮ್ಮ ಗುಪ್ತ ಕಾರ್ಯಸೂಚಿಯನ್ನು ಈಗ ಸಾರ್ವಜನಿಕಗೊಳಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಮತ್ತು ಸಂವಿಧಾನವನ್ನು ಹಲವು ಬಾರಿ ತಿದ್ದುಪಡಿ ಮಾಡಿದೆ. ಡಿ.ಕೆ ಶಿವಕುಮಾರ್ ತಮ್ಮ ಹೇಳಿಕೆಗಾಗಿ ಕಾಂಗ್ರೆಸ್ ಇಡೀ ದೇಶಕ್ಕೆ ಕ್ಷಮೆಯಾಚಿಸಬೇಕು ಎಂದು ಹೇಳಿದರು.
ಇನ್ನು ಈ ಬಗ್ಗೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮತ ಬ್ಯಾಂಕ್ ಉದ್ದೇಶಕ್ಕಾಗಿ ತುಷ್ಟಿಕರಣ ರಾಜಕೀಯವನ್ನು ಮಾಡುತ್ತಿದೆ. ಅವರು ಹಿಂದೂ ವಿರೋಧಿ ಮತ್ತು ಮುಸ್ಲಿಂ ಪರವಾಗಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ಸಂವಿಧಾನ ವಿರೋಧಿ ಆಗಿರುವುದರಿಂದಲೇ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಡಿಕೆಶಿ ಹೇಳಿದ್ದಾಗಿ ಅವರು ವಾಗ್ದಾಳಿ ನಡೆಸಿದರು.