ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ನಾಂದಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜುಲೈ 2ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ದೇಶದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲಿದ್ದು, ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ನಾಂದಿ ಹಾಡಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ರಾಜ್ಯಾಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಬೇಕಿರುವುದರಿಂದ ರಾಜ್ಯದ 7800 ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಅಳವಡಿಸಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. 10 ಲಕ್ಷ ಜನರು ಪಾಲ್ಗೊಳ್ಳಲಿದ್ದು, ಆರಂಭದಲ್ಲಿ ರಾಷ್ಟ್ರಗೀತೆಗೆ ಎದ್ದು ಹಾಡುವಾಗಿ ಎದ್ದುನಿಂತು ಪ್ರತಿಜ್ಞೆ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲೂ ಸುಮಾರು 550 ಕಡೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಯ ವ್ಯವಸ್ಥೆ ಮಾಡಲಾಗುತ್ತಿದೆ. ಜನರು 7676366666 ನಂಬರಿಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಕಾರ್ಯಕ್ರಮವನ್ನು ಬೆಂಬಲಿಸಲಿದ್ದಾರೆ ಎಂದರು.
ನಾವು ಡಿಜಿಟಲ್ ವ್ಯವಸ್ಥೆ ಬಳಸಿಕೊಂಡು ಈ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಟವಾಗಿ ಮಾಡುತ್ತಿದ್ದೇವೆ. ಇದು ಯಾರ ಕಾಪಿಯೂ ಅಲ್ಲ, ನಾವು ಯಾರದ್ದೂ ಕಾಪಿ ಮಾಡುವುದಿಲ್ಲ. ಬದಲಾಗಿ ನಮ್ಮ ನೂರಾರು ಯೋಜನೆಗಳನ್ನು ಬೇರೆಯವರು ಕಾಪಿ ಮಾಡಿದ್ದನ್ನು ಉದಾಹರಣೆ ಸಹಿತ ತೋರಿಸಬಲ್ಲೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.
ಹೆಮ್ಮೆಯ ಸುಪುತ್ರ
ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಿ ಹೆಬ್ಬಾಳಕರ್, ಅದನ್ನು ಕಾಂಗ್ರೆಸ್ ದೇವಸ್ಥಾನ ಎಂದು ಬಣ್ಣಿಸಿದರು.
ನಾನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಗ ಕಷ್ಟಪಟ್ಟು ಈ ಜಾಗವನ್ನು ಪಡೆದು ಇಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಚಾಲನೆಯನ್ನು ನೀಡಿದ್ದೆ. ಇಲ್ಲಿ ಮೊದಲ ಪತ್ರಿಕಾಗೋಷ್ಠಿ ನಡೆಸುತ್ತಿದ್ದೇನೆ. ಇದನ್ನು ನಾನು ಕಾಂಗ್ರೆಸ್ ದೇವಸ್ಥಾನ ಎಂದು ಕರೆಯುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಭಾವನಾತ್ಮಕವಾಗಿ ನುಡಿದರು.
ಡಿ.ಕೆ.ಶುವಕುಮಾರ ಅವರ ಜೊತೆಗೆ ಜಿಲ್ಲೆಯ ಹೆಮ್ಮೆಯ ಸುಪುತ್ರ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಮತ್ತು ಸಲೀಂ ಅಹ್ಮದ್ ಅವರು ಕೂಡ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರೂ ಒಗ್ಗಟ್ಟಿನಿಂದಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸತೀಶ್ ಜಾರಕಿಹೊಳಿ ಕೂಡ ನಮ್ಮ ಮುಖಂಡರು. ಕಾರ್ಯಕ್ರಮಕ್ಕೆ ಹೆಚ್ಚು ಪ್ರಚಾರ ಸಿಗಲಿ ಎನ್ನುವ ಕಾರಣಕ್ಕೆ ಬೇರೆ ಬೇರೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದೇವೆ. ಇಂದು ಎಲ್ಲ ಜಿಲ್ಲೆಗಳಲ್ಲೂ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದೇವೆ ಎಂದರು.
ಮಾಜಿ ಶಾಸಕ ಫಿರೋಜ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ರಾಜು ಸೇಠ್ ಮೊದಲಾದವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ