Belagavi NewsBelgaum NewsKannada NewsKarnataka NewsNationalPolitics

*ರೈತರ ಸಾಲ ವಸೂಲಾತಿಗೆ ಒತ್ತಡ ಹೇರಬೇಡಿ; ಮರುಪಾವತಿಗೆ ಕಾಲಾವಕಾಶ ನೀಡಿ: ಜಗದೀಶ್ ಶೆಟ್ಟರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬರಗಾಲದ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ವಸೂಲಾತಿಗೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರದೆ, ಮಾನವೀಯ ದೃಷ್ಟಿಕೋನದಿಂದ ಸ್ಪಂದಿಸಬೇಕು. ರೈತರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು. ರೈತರಿಗೆ ಅನಗತ್ಯ ಕಿರುಕುಳ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಗದೀಶ್ ಶೆಟ್ಟರ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ 2026–27ನೇ ಸಾಲಿನ ತೃತೀಯ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಕಷ್ಟದಲ್ಲಿರುವ ರೈತರಿಂದ ತಕ್ಷಣ ಸಾಲ ವಸೂಲಾತಿಗೆ ಮುಂದಾಗುವುದು ಸರಿಯಲ್ಲ. ರೈತರಿಗೆ ಹಂತ ಹಂತವಾಗಿ ಸಾಲ ಮರುಪಾವತಿ ಮಾಡಲು ಅವಕಾಶ ನೀಡಬೇಕು. ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಅಗತ್ಯವಿರುವ ರೈತರಿಗೆ ಹೊಸ ಬೆಳೆ ಸಾಲ ಮಂಜೂರು ಮಾಡಲು ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸಾಲ ಹಾಗೂ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು. ಆರ್ಥಿಕವಾಗಿ ಹಿಂದುಳಿದವರು ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದಾಗಿದ್ದು, ಅರ್ಹ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಜನರ ಆರ್ಥಿಕ ಅಗತ್ಯಗಳನ್ನು ಪರಿಗಣಿಸಿ ಸಮಗ್ರ ಸಮೀಕ್ಷೆ ನಡೆಸಬೇಕು. ಬ್ಯಾಂಕಿಂಗ್ ಸೇವೆಗಳ ಅಗತ್ಯವಿರುವ ಪ್ರದೇಶಗಳನ್ನು ಗುರುತಿಸಿ ಹೊಸ ಬ್ಯಾಂಕ್ ಶಾಖೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯ ಆದ್ಯತೆ ನೀಡಬೇಕು. ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವ ಮೂಲಕ ಜನಸ್ನೇಹಿ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

ಸಾಲ ಮಂಜೂರಾತಿಯಲ್ಲಿ ವಿಳಂಬ ಮಾಡಿದರೆ ಕ್ರಮ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಾಲ ಮಂಜೂರಾತಿ ಸಂದರ್ಭದಲ್ಲಿ ವಿನಾಕಾರಣ ನೆಪ ಹೇಳಿ ಅರ್ಜಿಗಳನ್ನು ತಿರಸ್ಕರಿಸುವುದು ಅಥವಾ ವಿಳಂಬ ಮಾಡುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸಬೇಕು. ಭಾಷೆಯ ಕಾರಣದಿಂದ ಗ್ರಾಹಕರಿಗೆ ಯಾವುದೇ ತೊಂದರೆ ಅಥವಾ ಸಂವಹನ ಸಮಸ್ಯೆ ಉಂಟಾಗಬಾರದು. ಬ್ಯಾಂಕಿಂಗ್ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ಈ ಕುರಿತು ಎಲ್ಲ ಬ್ಯಾಂಕ್ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ರಾಹುಲ್ ಶಿಂಧೆ ತಿಳಿಸಿದರು.

ಪ್ರಚಾರ ಪತ್ರ ಬಿಡುಗಡೆ

ಸಭೆಯಲ್ಲಿ ‘ಹಣಕಾಸು ಯೋಜನೆ ಸ್ಯಾಚ್ಯುರೇಶನ್ ಅಭಿಯಾನ’ ಹಾಗೂ ‘ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ಯ ಪ್ರಚಾರ ಪತ್ರಗಳನ್ನು ಸಂಸದ ಜಗದೀಶ್ ಶೆಟ್ಟರ್ ಮತ್ತು ಜಿಪಂ ಸಿಇಒ ರಾಹುಲ್ ಶಿಂಧೆ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ಘೋಡಕೆ, ಕೆನರಾ ಬ್ಯಾಂಕ್ ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಜೆ. ಪರಮೇಶ್ವರನ್, ವಿವಿಧ ಬ್ಯಾಂಕ್‌ಗಳ ಪ್ರಾದೇಶಿಕ ಮುಖ್ಯಸ್ಥರು, ಬ್ಯಾಂಕ್ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎನ್‌ಆರ್‌ಎಲ್‌ಎಂ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button