Kannada NewsKarnataka NewsLatest

*ಮುಂದುವರೆದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದು ಹಾಗೂ ನಾಳೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗದಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ಇಂದು ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಹೈಸ್ಕೂಲ್‌ವರೆಗೆ ರಜೆ ನೀಡಲಾಗಿದೆ.

ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಆದೇಶ ಹೊರಡಿಸಿದ್ದಾರೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು ನಗರ-ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.

ಆಗಸ್ಟ್ 5ರಂದು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Related Articles

Back to top button