Vikalachetanara Day
Cancer Hospital 2
Bottom Add. 3

*ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ*

ನವೆಂಬರ್ 15 ರೊಳಗೆ ವರದಿ ಸಲ್ಲಿಸಲು ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ


ಪ್ರಗತಿವಾಹಿನಿ ಸುದ್ದಿ; ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದರು.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ.ಗಳ ಬಿಡುಗಡೆ
ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33,000 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ತಾಳಿದೆ.
ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತಾಳಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರಮೋದಿ ಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

ಕೇಂದ್ರಕ್ಕೆ ಪುನಃ ಪತ್ರ ಬರೆದಿದೆ:
ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದರು.

ಬಿಜೆಪಿಗೆ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ:
ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ ಎಂದರು. ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಕೆ.ಇ. ಎ ಪರೀಕ್ಷೆ ಅಕ್ರಮ: ಸಂಪೂರ್ಣ ತನಿಖೆ:
ಕಲಬುರಗಿಯಲ್ಲಿ ಕೆ.ಇ. ಎ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ಬಿಚ್ಚಿಸಿದ್ದು, ಬ್ಲೂಟೂತ್ ಬಳಕೆಯಾಗುವ ಬಗ್ಗೆ ಮಾತನಾಡಿ ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕೊಲೆ ಬಗ್ಗೆ ತನಿಖೆ:
ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರು ಕೊಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಬ್ಬಂಟಿಗಳಾಗಿದ್ದ ಅವರ ಕೊಲೆಯಾಗಿರುವ ಬಗ್ಗೆ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ ಈ ಬಗ್ಗೆ ವಿಚಾರ ಮಾಡುವುದಾಗಿ ತಿಳಿಸಿದರು.

ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ:
ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿರುವ ಬಗ್ಗೆ ಮಾತನಾಡಿ ರಾಜಕೀಯವಾಗಿ ಟೀಕೆ ಮಾಡಿದ್ದಾರೆ. ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ ಎಂದರು. ಅವರು ಗ್ಯಾರಂಟಿ ಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದರು.

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ:
ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿಕೆ ನೀಡುತ್ತಿರುವ ಬಗ್ಗೆ ಮಾತನಾಡಿ, ಅವರು ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದರು.

ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಲು ಮಂತ್ರಿಗಳಿಗೆ ಸೂಚನೆ:
ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಕುಮಾರಸ್ವಾಮಿಗೆ ವ್ಯಂಗ್ಯವಾಡಲು ಬರುತ್ತದೆ ಎನ್ನುವುದು ಋಷಿಯ ವಿಚಾರ:
ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 19 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವ್ಯಂಗ್ಯವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಋಷಿ ಎಂದರು. ಮೊದಲು ಎನ್.ಡಿ.ಎ ಬಿಟ್ಟು ಹೊರಬರಲಿ ಎಂದು ತಿಳಿಸಿದರು.

ಈಶ್ವರಪ್ಪ ಸವಕಲು ನಾಣ್ಯ:
ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ. ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತುಗಳಿಗೆ ಏನು ಬೆಲೆ ಇದೆ. ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Bottom Add3
Bottom Ad 2

You cannot copy content of this page