*ರಸ್ತೆಗಳ ಅಭಿವೃದ್ಧಿಯಿಂದ ಆರ್ಥಿಕ ಪ್ರಗತಿ ಹೊಂದಲು ಸಾಧ್ಯ: ಸಂಸದೆ ಪ್ರಿಯಂಕಾ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಸ್ತೆಗಳ ಅಭಿವೃದ್ಧಿಯಿಂದ ಉತ್ತಮ ಸಂಪರ್ಕ ಸಾಧಿಸಲು ಸಾಧ್ಯವಾಗುವುದರಿಂದ ಆರ್ಥಿಕ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾ.ಪಂ ವ್ಯಾಪ್ತಿಯ ಹುದಲಿಯಿಂದ-ಕುಮರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 1 ಕೋಟಿ 65 ಲಕ್ಷ ರೂ. ವೆಚ್ಚದಲ್ಲಿ 3 ಕಿ.ಮೀಟರ್ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿ, ಗಣಪತಿ ಮಂಟಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 90% ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಕಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಅವರು, ಲೋಕಸಭೆ ಚುನಾವಣೆಯಲ್ಲಿ ಸಂಸದೆಯಾಗಿ ಆಯ್ಕೆಯಾಗಲು ದುಡಿದ ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರಿಗೆ ಇದೇ ವೇಳೆ ಧನ್ಯವಾದ ತಿಳಿಸಿದರು.
ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಹುದಲಿ ಗ್ರಾಪಂ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಅರವಿಂದ ಕಾರ್ಚಿ, ಹುದಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿ.ಕೆ.ಪಿ.ಎಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮದ ಹಿರಿಯರ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ