Belagavi NewsBelgaum NewsKannada NewsKarnataka NewsPolitics

*ಇಡಿ ದಾಳಿ: ಯಾರ ಮೇಲೂ ಆರೋಪ ಮಾಡಲು ಸಾಧ್ಯವಿಲ್ಲ ಎಂದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿಗೆ ಸಂಬಂಧಿಸಿದಂತೆ ಇಂತವರೇ ದೂರು ನೀಡಿದ್ದಾರೆ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ಈ ಕುರಿತು ಚರ್ಚಿಸಲಾಗುವುದು. ಸೂಕ್ತ ದಾಖಲೆಗಳಿಲ್ಲದೆ ಯಾರ ಮೇಲೂ ಆರೋಪ ಮಾಡಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ  ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇ.ಡಿ. ದಾಳಿಗೆ ಸಂಬಂಧಿಸಿದ ವಿಚಾರಗಳ ಕುರಿತು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಪರಿಶೀಲಿಸಿದ ಬಳಿಕವೇ ಮಾತನಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

Home add -Advt

ಎಸ್ಟಿ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ, ಕೆಲವೊಂದು ಕಡೆ ಇಂತಹ ಘಟನೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಸಂಕ್ಷಿಪ್ತವಾಗಿ ಉತ್ತರಿಸಿದರು.

ಕೃಷಿ, ಕುಡಿಯುವ ನೀರಿಗೆ ಕೆಡಿಪಿ ಸಭೆಯಲ್ಲಿ ಆದ್ಯತೆ

ಇಂದಿನ ಕೆಡಿಪಿ ಸಭೆಯಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಆದೇಶಗಳನ್ನು ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಬರ ಘೋಷಣೆಯಾಗಬೇಕಿದೆ. ಜಿಲ್ಲೆಯಲ್ಲಿ ಎರಡ್ಮೂರು ತಾಲೂಕುಗಳನ್ನು ಹೊರತುಪಡಿಸಿದರೆ ಬಹುತೇಕ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಲಭ್ಯತೆ ಹಾಗೂ ಕೃಷಿ ಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕೆಡಿಪಿ ಸಭೆಗೆ ಕ್ಷೇತ್ರದ ಶಾಸಕರು ಹಾಜರಾಗದಿದ್ದರೂ ಆಯಾ ಕ್ಷೇತ್ರಗಳ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ಕ್ಷೇತ್ರದ ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸುವುದು ಹಾಗೂ ಸಭೆಗೆ ಹಾಜರಾಗುವುದು ಶಾಸಕರ ಜವಾಬ್ದಾರಿ ಎಂದು ಸಚಿವರು ಹೇಳಿದರು.

ಎನ್‌ಒಸಿ ಇಲ್ಲದೆ ವ್ಯಾಕ್ಸಿನ್ ಡಿಪೋ ನಿರ್ಮಾಣಕ್ಕೆ ಹಿಂದಿನ ಆಡಳಿತವೇ ಹೊಣೆ

ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಿಂದ  156 ಎಕರೆ ಪ್ರದೇಶದಲ್ಲಿ ವ್ಯಾಕ್ಸಿನ್ ಡಿಪೋ ಅಭಿವೃದ್ಧಿಪಡಿಸಲಾಗಿದ್ದು, ಕಾಮಗಾರಿಯಲ್ಲಿ ವಿದೇಶಿ ಮಾದರಿಯ ಸಂಪ್ರದಾಯವನ್ನು ಅಳವಡಿಸಲಾಗಿದೆ. ಆದರೆ, ಯೋಜನೆಗೆ ಅಗತ್ಯವಾದ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಪಡೆಯಲಾಗಿದೆಯೇ ಎಂಬ ಬಗ್ಗೆ ಸೂಕ್ತ ದಾಖಲೆಗಳಿಲ್ಲ ಎಂದು  ಸಚಿವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. 

 ವ್ಯಾಕ್ಸಿನ್ ಡಿಪೋ ಅಭಿವೃದ್ಧಿಗೆ ಸುಮಾರು 300 ಕೋಟಿ ರೂ. ವೆಚ್ಚವಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವಿಚಾರಗಳ ಪರಿಶೀಲನೆಗಾಗಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಲೋಕಾಯುಕ್ತರಿಗೂ ದೂರು ನೀಡಲಾಗಿದೆ ಎಂದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದ ವ್ಯಾಕ್ಸಿನ್ ಡಿಪೋವನ್ನು ಯಾರ ಸೂಚನೆಯ ಮೇರೆಗೆ ನಿರ್ಮಿಸಲಾಗಿದೆ ಎಂಬುದರ ಕುರಿತು ಸ್ಪಷ್ಟ ದಾಖಲೆಗಳು ಲಭ್ಯವಿಲ್ಲ. ಅಗತ್ಯ ಎನ್‌ಒಸಿ ಇಲ್ಲದೆ ಕಾಮಗಾರಿ ಕೈಗೊಳ್ಳಲಾಗಿದ್ದರೆ, ಅದಕ್ಕೆ ಅಂದಿನ ಆಡಳಿತ ಹಾಗೂ ಸಂಬಂಧಿಸಿದ ರಾಜಕಾರಣಿಗಳು ಮತ್ತು ಶಾಸಕರು ಹೊಣೆಗಾರರಾಗುತ್ತಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ವ್ಯಾಕ್ಸಿನ್ ಡಿಪೋವನ್ನು ಪಾಲಿಕೆಗೆ ಹಸ್ತಾಂತರಿಸಬೇಕೇ ಅಥವಾ ಅದರ ನಿರ್ವಹಣೆಯ ಜವಾಬ್ದಾರಿಯನ್ನು ಯಾರಿಗೆ ನೀಡಬೇಕು ಎಂಬುದರ ಕುರಿತು ಚಿಂತನೆ ನಡೆಯುತ್ತಿದೆ. ಈ ವಿಚಾರದಲ್ಲಿ ಈ ಹಿಂದೆಯೇ ತಕರಾರು ವ್ಯಕ್ತಪಡಿಸಲಾಗಿತ್ತು ಎಂದು ಅವರು ಸಚಿವರು ಸ್ಪಷ್ಟಪಡಿಸಿದರು.

Related Articles

Back to top button