*ಕುಡಿಯುವ ನೀರಿಗಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾಲಿಗೆ ಬಿದ್ದ ವೃದ್ಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ವೃದ್ಧರೊಬ್ಬರು ಯುವ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಕಾಲಿಗೆ ಬಿದ್ದು ಕಣ್ಣೀರಿಡುತ್ತಾ ಮನವಿ ಮಾಡಿದ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.
ಕುಡಿಯುವ ನೀರಿಗಾಗಿ ಗ್ರಾಮಸ್ಥರು ಜನಪ್ರತಿನಿಧಿಗಳ ಮುಂದೆ ಅಂಗಲಾಚುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಉಮರಾಣಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಗ್ರಾಮಕ್ಕೆ ಐದು-ಆರು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದ್ದು, ಪ್ರತಿನಿತ್ಯದ ಅಗತ್ಯಗಳಿಗೆ ನೀರು ಹೊಂದಿಸಿಕೊಳ್ಳಲು ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮನೆಗಳ ಕುಡಿಯುವ ನೀರು ಸೇರಿದಂತೆ ಇತರ ಅಗತ್ಯಗಳಿಗೂ ನೀರಿನ ಕೊರತೆ ಎದುರಾಗಿದ್ದು, ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಬಳಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಕೂಡಲೇ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವೃದ್ಧರೊಬ್ಬರು ನೀರಿನ ಸಮಸ್ಯೆಯ ಗಂಭೀರತೆಯನ್ನು ವಿವರಿಸುತ್ತಾ ಸಂಸದೆ ಅವರ ಕಾಲಿಗೆ ಬಿದ್ದು ಕಣ್ಣೀರಿಟ್ಟರು. ಕುಡಿಯುವ ನೀರಿಗಾಗಿ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ಆದರೆ, ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದ ಆರಂಭದಲ್ಲಿ ಸಂಸದೆ ಕಾರಿನಲ್ಲಿಯೇ ಕುಳಿತು ಅಹವಾಲು ಆಲಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಕಾರಿನಿಂದ ಕೆಳಗಿಳಿದು ನೇರವಾಗಿ ತಮ್ಮ ಸಮಸ್ಯೆಗಳನ್ನು ಆಲಿಸುವಂತೆ ಒತ್ತಾಯಿಸಿದರು. ಗ್ರಾಮಸ್ಥರ ಒತ್ತಾಯದ ಬಳಿಕ ಕಾರಿನಿಂದ ಕೆಳಗಿಳಿದ ಸಂಸದೆ, ಸ್ಥಳೀಯರ ಅಹವಾಲುಗಳನ್ನು ಆಲಿಸಿದರು.
ಈ ವೇಳೆ ಗ್ರಾಮಸ್ಥರು ಗ್ರಾಮದಲ್ಲಿ ನಿಯಮಿತವಾಗಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು. ಐದಾರು ದಿನಗಳಿಗೊಮ್ಮೆ ನೀರು ಬಿಡುವುದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಸಮಸ್ಯೆಯನ್ನು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಒಟ್ಟಿನಲ್ಲಿ, ಕುಡಿಯುವ ನೀರಿನಂತಹ ಅತ್ಯಗತ್ಯ ಮೂಲಸೌಕರ್ಯಕ್ಕಾಗಿ ವೃದ್ಧರು ಜನಪ್ರತಿನಿಧಿಗಳ ಕಾಲಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ಗ್ರಾಮೀಣ ಭಾಗದ ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಂಸದೆ ನೀಡಿರುವ ಭರವಸೆ ಕಾರ್ಯರೂಪಕ್ಕೆ ಬಂದು ಉಮರಾಣಿ ಗ್ರಾಮಸ್ಥರಿಗೆ ಯಾವಾಗ ಸಮರ್ಪಕವಾಗಿ ನೀರು ದೊರೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.



