ಪ್ರಗತಿವಾಹಿನಿ ಸುದ್ದಿ : ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ.
ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತು ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ.
ಮಹಾರಾಷ್ಟ್ರದಲ್ಲಿ ಎಲ್ಲಾ 288 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ರಾಜ್ಯದ 288 ಸ್ಥಾನಗಳ ಪೈಕಿ 149 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಏಕನಾಥ್ ಶಿಂಧೆ ಅವರ ಶಿವಸೇನೆಯು 81 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 59 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಇನ್ನು ಜಾರ್ಖಂಡ್ ಅಲ್ಲಿ ಕೂಡ ಚುನಾವಣೆಯ ಕಾವು ಹೆಚ್ಚಾಗಿದ್ದು, ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಸ್ಥಾನಗಳಿದ್ದು, ಈ ಪೈಕಿ 38 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯಲಿದೆ.
ಇದಕ್ಕೂ ಮುನ್ನ ಅಂದರೆ ನವೆಂಬರ್ 13 ರಂದು ಮೊದಲ ಹಂತದಲ್ಲಿ 43 ಸ್ಥಾನಗಳಿಗೆ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 65% ಕ್ಕಿಂತ ಹೆಚ್ಚು ಮತದಾನವಾಗಿದೆ. ಇದೀಗ ಎರಡನೇ ಹಂತದ ಮತದಾನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ.
ಇತ್ತ ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳ ಉಪಚುನಾವಣೆಗೆ ಕೂಡ ಇಂದು ಮತದಾನ ನಡೆದಿದೆ. ಈ ಹಿನ್ನಲೆ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ