CrimeKannada NewsKarnataka NewsLatest

*ಸೋಲಾರ್ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶ*: *19 ವರ್ಷದ ಯುವಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆಲಸಕ್ಕೆ ಸೇರಿ ಕೆಲವೇ ದಿನಗಳಲ್ಲಿ ಯುವಕನೊಬ್ಬ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಕಟ್ಟಡದ ಮೇಲಿದ್ದ ಸೋಲಾರ್ ಸ್ವಚ್ಛಗೊಳಿಸುವ ವೇಳೆ ದುರ್ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಮಂಠಾಳ ಗ್ರಾಮದ ಅಮಿತ್ (19) ಎಂದು ಗುರುತಿಸಲಾಗಿದೆ. ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನಿಲ್ ರಗಟೆ ಅವರಿಗೆ ಸೇರಿದ ಪೆಟ್ರೋಲ್ ಬಂಕ್ ಇದಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ತುಂಬಿಸುವ ಕೆಲಸಕ್ಕಾಗಿ ಅಮಿತ್‌ನನ್ನು ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆದರೆ, ಪೆಟ್ರೋಲ್ ಬಂಕ್ ಕಟ್ಟಡದ ಮೇಲಿದ್ದ ಸೋಲಾರ್ ಸ್ವಚ್ಛಗೊಳಿಸುವ ಕೆಲಸಕ್ಕೆ ಅಮಿತ್‌ನನ್ನು ಕಳುಹಿಸಲಾಗಿತ್ತು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯ ಬಳಿಕ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಸದ ಸ್ವರೂಪ ಬದಲಿಸಿ ಸೋಲಾರ್ ಸ್ವಚ್ಛಗೊಳಿಸುವ ಕೆಲಸಕ್ಕೆ ಕಳುಹಿಸಿದ್ದೇ ದುರ್ಘಟನೆಗೆ ಕಾರಣ ಎಂದು ಆರೋಪಿಸಿ ಪೆಟ್ರೋಲ್ ಬಂಕ್ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತದಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಯುವಕನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯುತ್ ಸ್ಪರ್ಶಕ್ಕೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ಅಂಶಗಳ ಕುರಿತು ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button