
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು. ಮಾರಾಟ ಮಾಡುವ ಅಂಗಡಿ, ಮಳಿಗೆಗಳು ಹಾಗೂ ಮಾಲ್ ಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನೆ ನೀಡಬೇಕು. ಮಾರಾಟ ಮಾಡುವುದು ಕಂಡು ಬಂದಲ್ಲಿ, ಅಂತಹ ವ್ಯಾಪಾರಸ್ಥರಿಗೆ ದಂಡ ವಿಧಿಸಿ, ಕ್ರಮ ಕೈಗೊಳ್ಳಬೇಕು ಎಂದು ರಾಷ್ಟೀಯ ಹಸಿರು ನ್ಯಾಯಾಧಿಕರಣ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಾದ ಸುಭಾಷ ಆಡಿ ಅವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಮೇ.7) ನಡೆದ ” ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಚ್ಚಿನ ತ್ಯಾಜ್ಯಕ್ಕೆ ಕಾರಣವಾಗುತ್ತಿರುವ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವ ವ್ಯಾಪಾರಸ್ಥರಿಂದ ದಂಡ ವಿಧಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕಾಂಪೋಸ್ಟ್ ಮಾಡಬಹುದಾದ ಪ್ಲಾಸ್ಟಿಕ್ನಿಂದ ತಯಾರಿಸದ ಚೀಲಗಳಿಗೆ ಈ ನಿಷೇಧ ಅನ್ವಯವಾಗುವುದಿಲ್ಲ. ತ್ಯಾಜ್ಯ ವಿಂಗಡಣೆ, ವಿಲೇವಾರಿ ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ತ್ಯಾಜ್ಯ ವಿಲೇವಾರಿ ಕುರಿತು ಜನರಲ್ಲಿ ಅರಿವು ಮೂಡಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೇ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ನಿಗದಿಪಡಿಸಿದ ಜಾಗದಲ್ಲಿ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ, ಪುನರ್ ಉತ್ಪತ್ತಿಯಾಗುವ ವಸ್ತುಗಳನ್ನು ಉತ್ಪಾದಿಸುವ ಕುರಿತು ಯೋಜನೆ ರೂಪಿಸಬೇಕು.
ನಗರ ಬಹಳ ವೇಗವಾಗಿ ಬೆಳೆಯುತ್ತಿದ್ದು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಿರ್ವಹಿಸಬೇಕಾದರೆ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವಿದೆ. ನಗರದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಗಳ ಸಮರ್ಪಕ ವಿಲೇವಾರಿಗೆ ಪಾಲಿಕೆ ಅಧಿಕಾರಿಗಳು ಸ್ಥಳ ಗುರುತಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸುಭಾಷ್ ಆಡಿ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮುಂಬರುವ ದಿನಗಳಲ್ಲಿ ಇ-ತ್ಯಾಜ್ಯ, ಶೈಕ್ಷಣಿಕ ಸಂಸ್ಥೆಗಳ ಜಾಗೃತಿ ಕಾರ್ಯಕ್ರಮ, ಜೈವಿಕ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಇನ್ನಿತರ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಸಭೆ ನಡೆಸಿ ನಿರ್ದೇಶನ ನೀಡಲಾಗುವದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ, ಪರಿಸರ ಅಧಿಕಾರಿ ಜಗದಿಶ್, ಎ. ಹೆಚ್, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾಂವಿ, ಡಿಸಿಪಿ ರವೀಂದ್ರ ಗಡಾದಿ ಸಭೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ;ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕಷ್ಟವಲ್ಲ ಎಂದ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ