Politics

*ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. 

ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.

ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು.

ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ,  ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.‌ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.

ಇತರೆ ನಿರ್ಣಯಗಳು 

ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.

ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button