*ಜೈನ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ*: *ಮಾಜಿ ಸಚಿವ ಶ್ರೀಮಂತ ಪಾಟೀಲ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯದ ಜೈನ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಮಾಜಿ ಸಚಿವ ಶ್ರೀಮಂತ (ತಾತ್ಯಾ) ಪಾಟೀಲ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರಸಂತ ಪರಮಪೂಜ್ಯ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರು ಜೈನ ಸಮಾಜದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಪ್ರತ್ಯೇಕ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.
ಜೈನ ಸಮಾಜವು ಶಿಕ್ಷಣ, ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ಆದರೆ ಸಮಾಜದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಇನ್ನಷ್ಟು ಉತ್ತೇಜನ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಯಾದರೆ ಸಮಾಜದ ಬಡ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಆದ್ದರಿಂದ ರಾಜ್ಯ ಸರ್ಕಾರವು ಆಚಾರ್ಯ ಗುಣಧರನಂದಿ ಮಹಾರಾಜರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಜೈನ ಸಮಾಜದ ಹಿತದೃಷ್ಟಿಯಿಂದ ಕೂಡಲೇ ಪ್ರತ್ಯೇಕ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶ್ರೀಮಂತ ಪಾಟೀಲ ಆಗ್ರಹಿಸಿದರು.



