Kannada NewsKarnataka NewsLatest

*ದಸರಾ ರಜೆಯಿಲ್ಲದೆ ಪರೀಕ್ಷೆ*: *ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿನಿಯರ ಬೃಹತ್ ಪ್ರತಿಭಟನೆ!*

ಪ್ರಗತಿವಾಹಿನಿ ಸುದ್ದಿ: ಕರಾವಳಿಯ ಪ್ರಮುಖ ಹಬ್ಬ ಮಂಗಳೂರು ದಸರಾ ಸಂಭ್ರಮದ ನಡುವೆ ಪರೀಕ್ಷೆ ನಡೆಸಲು ಮುಂದಾದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಬಹಿಷ್ಕರಿಸಿರುವ ನೂರಾರು ವಿದ್ಯಾರ್ಥಿನಿಯರು ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೂಡ ಪ್ರತಿಭಟನೆಗೆ ಬೆಂಬಲ ನೀಡಿದೆ.

ಮಂಗಳೂರಿನ ಬೆಂದೂರ್‌ವೆಲ್ ಸಮೀಪವಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಆದರೆ, ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಿಗದಿಪಡಿಸಿರುವುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಮಂಗಳೂರು ದಸರಾ ಕರಾವಳಿಯ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಬ್ಬವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಬ್ಬದ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದ್ದಾರೆ. ಹೀಗಾಗಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಮುಂಭಾಗ ಧರಣಿ ನಡೆಸುತ್ತಿದ್ದಾರೆ.

ಪರೀಕ್ಷೆ ಮುಂದೂಡುವಂತೆ ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಆಡಳಿತ ಮಂಡಳಿಯ ನಿರ್ಧಾರವನ್ನು ಅವರು ಖಂಡಿಸಿದ್ದಾರೆ. ಇನ್ನು, ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಿ ಪರೀಕ್ಷೆಗಳನ್ನು ತಕ್ಷಣ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿವೆ. ಸದ್ಯ ಕಾಲೇಜು ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿನಿಯರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button