ಕಣ್ಮನ ಸೂರೆಗೊಂಡ ಉಡುಪಿ ಪರ್ಯಾಯ ಶೋಭಾಯಾತ್ರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ


ಪ್ರಗತಿವಾಹಿನಿ ಸುದ್ದಿ, ಉಡುಪಿ: ಉಡುಪಿಯಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಗುರುವಾರ ಬೆಳಗಿನ ಜಾವ 2.30ರಿಂದ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆ ಕಣ್ಮನ ಸೆಳೆಯಿತು.
ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಸೇರಿದಂತೆ ಹಲವಾರು ಗಣ್ಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.



ಈ ವೇಳೆ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಶಾಸಕರಾದ ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಲಕ್ಷಾಂತರ ಸಂಖ್ಯೆಯಲ್ಲಿ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.
ಭವ್ಯ ಶೋಭಾ ಯಾತ್ರೆ:
ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಜೋಡುಕಟ್ಟೆ ಆಗಮಿಸಿದರು. ಬಳಿಕ ವೈಭವದ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹೊರಟ ಮೆರವಣಿಗೆ ಕೋರ್ಟ್ ರಸ್ತೆ, ಹಳೆಯ ಡಯನಾ ಸರ್ಕಲ್, ಐಡಿಯಲ್ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ರಥಬೀದಿಗೆ ಸಾಗಿ ಬಂತು.
ಮೆರವಣಿಗೆಯಲ್ಲಿ ಸಾಗಿದ ಜನಪದ ಕಲಾ ಪ್ರಕಾರಗಳು ಕಣ್ಮನ ಸೆಳೆದವು. ಸ್ತಬ್ಧಚಿತ್ರಗಳು, ಚೆಂಡೆಯ ನಾದ ಮೆರವಣಿಗೆಯ ಅಂದ ಹೆಚ್ಚಿಸಿದವು.

ಜಗ್ಗಲಿಕೆ ವಾದ್ಯ, ಶ್ರೀಸಾಯಿ ಚೆಂಡೆ ಬಳಗ, ಪೂಜೆ ಕುಣಿತ, ಗೊರವರ ಕುಣಿತ, ಕೊಂಬು ಕಹಳೆ, ಪುಟಾಣಿಗಳಿಂದ ಮರಕಾಲು ಕುಣಿತ, ಕಂಗೀಲು ನೃತ್ಯ, ನಾಸಿಕ್ ಬ್ಯಾಂಡ್, ಗೊಂಬೆಯಾಟ, ಕೊಂಬೆ ಬಳಗ, ಹರೇ ರಾಮ ಹರೇ ಕೃಷ್ಣ, ಸಹಿತ ವಿವಿಧ ತಂಡಗಳು ಭಾಗಿಯಾಗಿದ್ದವರು ಅಯೋಧ್ಯೆಯ ರಾಮಮಂದಿರದ ಟ್ಯಾಬ್ಲೋ ಆಕರ್ಷಣಿಯವಾಗಿತ್ತು.

ನೂರಾರು ಟ್ಯಾಬ್ಲೋ, ಕಲಾತಂಡಗಳ ಬಳಿಕ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಾಹನದಲ್ಲಿರಿಸಿದ ಪಲ್ಲಕ್ಕಿಯಲ್ಲಿ ಕುಳಿತು ಸಾಗಿದರು.
ಗುರುವಾರ ಮುಂಜಾನೆ ಸುಮಾರು 2.30ಕ್ಕೆ ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆ ಸುಮಾರು ಎರಡು ಕಿ.ಮೀ ಸಾಗಿ ರಥಬೀದಿಯಲ್ಲಿ ಸಂಪನ್ನಗೊಂಡಿತು. ಸುರಕ್ಷತೆಯ ದೃಷ್ಟಿಯಿಂದ ಬಿಗು ಪೊಲೀಸ್ ಭದ್ರತೆ ನೀಡಲಾಯಿತು.
ವಿಶ್ವ ಗೀತಾ ಪರ್ಯಾಯ ದರ್ಬಾರ್ :
ನಂತರ ನಡೆದ ಪರ್ಯಾಯೋತ್ಸವದ ವಿಶ್ವ ಗೀತಾ ಪರ್ಯಾಯ ದರ್ಬಾರ್ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಪರ್ಯಾಯ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.
ಬೆಳಗ್ಗೆ 10.30ಕ್ಕೆ ಶ್ರೀಗಳು ಮೊದಲ ಶ್ರೀಕೃಷ್ಣ ಪೂಜೆ ನೆರವೇರಿಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ