*ದೇವಸ್ಥಾನದ ದಾರಿ ದುರಂತದಲ್ಲಿ ಅಂತ್ಯ*: *ಕಾರಿನಲ್ಲಿದ್ದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬಕ್ಕೆ ವಿಧಿ ಕ್ರೂರವಾಗಿ ಕಾದಿತ್ತು. ಸಂತೋಷದಿಂದ ಆರಂಭವಾಗಿದ್ದ ಪ್ರವಾಸ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದೆ. ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಇಬ್ಬರ ಜೀವವನ್ನು ಬಲಿ ಪಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೂ ಮುನ್ನ ಕುಟುಂಬದ ಸದಸ್ಯರು ಕಾರಿನಲ್ಲಿ ರೀಲ್ಸ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ ಹಂಚಿಕೊಂಡಿದ್ದರು ಎಂಬ ಮಾಹಿತಿಯೂ ಹೊರಬಂದಿದೆ.
ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ.
ಮೃತರನ್ನು ಮಂಡ್ಯದ ಗುತ್ತಲು ಬಡಾವಣೆಯ ಮಹದೇವು (49) ಹಾಗೂ ತೈಲೂರು ಗ್ರಾಮದ ರಿತ್ವಿಕಾ (8) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇನ್ನು ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಈ ನಡುವೆ ಅಪಘಾತಕ್ಕೂ ಮುನ್ನ ಕುಟುಂಬದ ಸದಸ್ಯರು ಕಾರಿನಲ್ಲೇ ರೀಲ್ಸ್ ಮಾಡಿದ್ದರು ಎನ್ನಲಾಗಿದೆ. ಆ ವಿಡಿಯೋವನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿಯೂ ಹಂಚಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಕೆಲವೇ ಸಮಯದಲ್ಲಿ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿರುವುದು ಕುಟುಂಬದ ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಲಾರಿಗೆ ಡಿಕ್ಕಿ ಹೊಡೆಯಲು ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




