*ಬೆಳಗಾವಿ ಡಿಸಿ ಕಚೇರಿ ನುಗ್ಗಲು ಯತ್ನಿಸಿದ ರೈತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಕೊಟ್ಟ ಭರವಸೆಯಂತೆ ಸಭೆ ನಡೆಸದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ರೈತ ಮುಖಂಡ ಗಣೇಶ ಇಳಿಗೇರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು, ಕಬ್ಬಿನ ದರ ನಿಗದಿ ಕುರಿತು ತಕ್ಷಣ ಸಭೆ ನಡೆಸಿ ಸೂಕ್ತ ನಿರ್ಧಾರ ಪ್ರಕಟಿಸುವಂತೆ ಆಗ್ರಹಿಸಿದರು. ಬೆಳಗ್ಗೆಯಿಂದಲೇ ಸಭೆಗಾಗಿ ಕಾಯುತ್ತಿದ್ದರೂ ಅಧಿಕಾರಿಗಳು ಮಾತಿನಂತೆ ಸಭೆ ನಡೆಸದೆ ವಿಳಂಬ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರಕ್ಕೆ ಬೀಗ ಹಾಕಲು ಮುಂದಾದರು. ಇದನ್ನು ತಡೆಯಲು ಪೊಲೀಸರು ಯತ್ನಿಸಿದಾಗ ರೈತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನೂಕಾಟ-ತಳ್ಳಾಟ ನಡೆದಿದ್ದು, ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ರೈತರ ಸಮಸ್ಯೆಗೆ ಕೂಡಲೇ ಸ್ಪಂದಿಸದಿದ್ದರೆ ಕೆಲವೇ ಕ್ಷಣಗಳಲ್ಲಿ ಚನ್ನಮ್ಮ ವೃತ್ತವನ್ನು ಬಂದ್ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಇಷ್ಟಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಸಿದರು.
ಕಬ್ಬಿನ ದರ ನಿಗದಿ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಹೊರಬೀಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಆಕ್ರೋಶ ಸ್ಫೋಟಗೊಂಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.




