*ಮಲಪ್ರಭಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ರೈತರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ನುರಿಸುವ ಹಂಗಾಮು ಆರಂಭವಾಗಿ ಕೇವಲ ನಾಲ್ಕು ದಿನಗಳಲ್ಲೇ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಟರ್ಬೈನ್ ಸ್ಫೋಟಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಾರ್ಖಾನೆ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಯಲ್ಲಿ ಹಳೆಯ ಹಾಗೂ ತುಕ್ಕು ಹಿಡಿದ ಟರ್ಬೈನ್ ಅಳವಡಿಸಿರುವುದೇ ಸ್ಫೋಟಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಅಲ್ಲದೆ, ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ.
ಸ್ಫೋಟ ಸಂಭವಿಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಈ ವೇಳೆ ಸಂಬಂಧಪಟ್ಟ ತಾಂತ್ರಿಕ ಅಧಿಕಾರಿಗಳು ಸ್ಥಳದಲ್ಲಿ ಇಲ್ಲ ಎಂಬ ಆರೋಪ ಕೇಳಿಬಂದಿದೆ. ಕಾರ್ಖಾನೆಯ ಕಾರ್ಮಿಕರಿಂದಲೇ ಟರ್ಬೈನ್ ದುರಸ್ತಿ ಕಾರ್ಯ ಮಾಡಿಸಲಾಗುತ್ತಿದೆ ಎನ್ನಲಾಗಿದ್ದು, ಪರಿಣತ ತಜ್ಞರ ಮೇಲ್ವಿಚಾರಣೆಯಿಲ್ಲದೆ ಇಂತಹ ಗಂಭೀರ ತಾಂತ್ರಿಕ ದೋಷವನ್ನು ಸರಿಪಡಿಸುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಇನ್ನು ಟರ್ಬೈನ್ ಸ್ಫೋಟದ ಹಿಂದೆ ಯಾವುದೇ ಪೂರ್ವಯೋಜಿತ ಉದ್ದೇಶವಿದೆಯೇ ಎಂಬ ಅನುಮಾನವನ್ನೂ ರೈತ ಮುಖಂಡರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಕಾರ್ಖಾನೆಯಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯ ಮಾಡಿ ಹೊರರಾಜ್ಯದ ಗುತ್ತಿಗೆದಾರರಿಗೆ ಕೆಲಸ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಸುಮಾರು 16 ಕೋಟಿ ರೂಪಾಯಿ ಮೊತ್ತದ ಗುತ್ತಿಗೆಯನ್ನು ಹೊರರಾಜ್ಯದ ಗ್ಯಾಂಗ್‌ಗಳಿಗೆ ನೀಡಲಾಗಿದೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಂಗಾಮಿನ ಆರಂಭದಲ್ಲೇ ಇಂತಹ ಗಂಭೀರ ಅವಘಡ ಸಂಭವಿಸಿರುವುದು ಕಾರ್ಖಾನೆಯ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆಡಳಿತ ಮಂಡಳಿ ಈ ಎಲ್ಲ ಆರೋಪಗಳಿಗೆ ಸ್ಪಷ್ಟನೆ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.




