ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ಅನ್ನದಾತರು ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ರೈತರು ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಬೆಂಗಳೂರಿನಲ್ಲಿ ರೈತರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ 30 ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡಿವೆ.
ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಆನಂದ್ ರಾವ್ ಸರ್ಕಲ್ ಬಳಿ ತಡೆದು ನಿಲ್ಲಿಸಿದ್ದಾರೆ. ಇದಕ್ಕೂ ಜಗ್ಗದ ರೈತರು ಆನಂದ್ ರಾವ್ ಸರ್ಕಲ್ ಫ್ಲೈ ಓವರ್ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ವೇಳೆ ಮಾತನಾಡಿದ ರೈತ ಮಹಿಳೆ ಮಂಜುಳಾ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಮನಮಂದಂತೆ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಸರ್ವನಾಶ ಮಾಡಲು ಹೊರಟಿವೆ ಎಂದು ಕಿಡಿಕಾರಿದದರೆ.
ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನವಾಗಿದ್ದು, ರೈತರನ್ನು ಸಂಕಷ್ಟಕ್ಕೀಡು ಮಾಡುವ ಈ ಎಲ್ಲಾ ಕಾಯ್ದೆಯನ್ನು ಸರ್ಕಾರ ವಾಪಸ್ ಪಡೆಯಬೇಕು. ಪ್ರಧಾನಿ ಮೋದಿಯವರು ಮನಸ್ಸಿಗೆ ಬಂದಂತೆ ಕಾಯ್ದೆ ಜಾರಿಗೆ ತರುತ್ತಿದ್ದಾರೆ. ವಿಮಾನದಲ್ಲಿ ಓಡಾಡುವ ಪ್ರಧಾನಿಗೆ ರೈತರ ಕಷ್ಟ ಹೇಗೆ ಗೊತ್ತು? ಹೆಲಿಕ್ಯಾಪ್ಟರ್ ನಲ್ಲಿ ಕುಳಿತು, ಅಧಿವೇಶನ ಮಾಡುವವರು ರೈತರ ಭೂಮಿಯನ್ನು ಮನಬಂದಂತೆ ಮಾರಲು ಹೊರಟಿದ್ದಾರೆ. ಪ್ರಶ್ನೆ ಮಾಡಿದರೆ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಇದೇರೀತಿ ಕಾಯ್ದೆ ಗಳನ್ನು ಜಾರಿ ತಂದರೆ ಮುಂದೆ ರೈತನೆಂಬುವವನೇ ಭೂಮಿ ಮೇಲೆ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ