
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಅನ್ನದಾತ ಬೀದಿಗಿಳಿದು ಹೋರಾಟ ನಡೆಸಿದ್ದಾನೆ. ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರೆ, ಇನ್ನು ಹಲವೆಡೆಗಳಲ್ಲಿ ಸಾರಿಗೆ ಸಂಚಾರ ಬಂದ್ ಮಾಡಿ ಕಿಡಿಕಾರಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿಯೂ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ಸಂಘಟನೆಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಬಸ್ ಸಂಚಾರ ಬಂದ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿ ಬಸ್ ತಡೆ ನಡೆಸಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ ಕಾವು ಏರತೊಡಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ರೈತರಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಹಾತ್ಮಾ ಗಾಂಧಿ ಫೋಟೋ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ರೈಸ್ತೆ ಮಧ್ಯೆಯೇ ಕುಳಿತು ಧರಣಿ ನಡೆಸುತ್ತಿರುವ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ಸಂಭಿಸಿದೆ.
ರೈತರ ಹೋರಾಟಕ್ಕೆ ಕರವೇ ಕಾರ್ಯಕರ್ತರು ಬೆಂಬಲ ನೀಡಿದ್ದು, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಕಾರ್ಯಕರ್ತರು ರಸ್ತೆಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ