ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ರೈತರು ರಸ್ತೆಗಳಲ್ಲೇ ಉರುಳಿಸೇವೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹೆಚ್ಚಿದ ಹಿನ್ನೆಲೆಯಲ್ಲಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಾವಿರಾರು ರೈತರು ಬೀದಿಗಿಳಿದಿದ್ದು, ಪ್ರತಿಭಟನಾ ರ್ಯಾಲಿ ಮೂಲಕ ಮೈಸೂರು ಬ್ಯಾಂಕ್ ವೃತ್ತಕ್ಕೆ ಆಗಮಿಸಿದ ರೈತರು ರಸ್ತೆ ತಡೆ ನಡೆಸಿ ಉರುಳುಸೇವೆ ಮಾಡಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರೈತರ ಪ್ರತಿಭಟನೆಗೆ 34ಕಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಆ ದಿನಗಳು ಚಿತ್ರದ ಖ್ಯಾತಿಯ ನಟ ಚೇತನ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಸ್ತೆ ರಸ್ತೆಗಳಲ್ಲೇ ಧರಣಿ ಕುಳಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಪೊಲೀಸರು ನೂರಾರು ರೈತರನ್ನು ವಶಕ್ಕೆ ಪಡೆದು ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ. ಈ ವೇಳೆ ನಟ ಚೇತನ್, ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಸೇರಿದಂತೆ ಹಲವರನ್ನು ಕೂಡ ಬಂಧಿಸಲಾಗಿದೆ.
ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ಗಳಲ್ಲಿ ಕರೆದೊಯ್ಯುತ್ತಿದ್ದಂತೆಯೇ ರೊಚ್ಚಿಗೆದ್ದ ಪ್ರತಿಭಟನಾ ನಿರತರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಎರಡಕ್ಕೂ ಹೆಚ್ಚು ಬಸ್ ಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ