ಪ್ರಗತಿವಾಹಿನಿ ಸುದ್ದಿ; ರೈತರು ಹಾಗೂ ಕೃಷಿಕರಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಕೆಲ ಘೋಷಣೆಗಳನ್ನು ಮಾಡಿದ್ದಾರೆ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ.
ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು.
. ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
• ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
• ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
• ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
• ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
• ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.
. ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.
ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು.
ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.
ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.
ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.
ರೇಷ್ಮೆ :
ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ
ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು.
ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು.
ಪಶುಸಂಗೋಪನೆ :
ಈ ಆಯವ್ಯಯದಲ್ಲಿ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು;
• ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
• ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು.
• ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ
ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು.
ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.
ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು.
ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ
100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು.
ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:
• ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
• ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ ಹಾಕಲಾಗುವುದು.
• ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.
• ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು.
ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.
ಮೀನುಗಾರಿಕೆ:
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು;
• ಹೊನ್ನಾವರ ತಾಲ್ಲೂಕಿನ ಮಂಕಿ/ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.
• ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.
• ಆಕ್ವಾ ಪಾರ್ಕ್‌ಗಳ ಸ್ಥಾಪನೆ.
• ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ.
• ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.
ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.
ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.
2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ
ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.
ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು.
ಸಹಕಾರ:
ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ
27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.
ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು
ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ
7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು.
ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು
132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
• ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು
57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ.
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 1೬ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.
ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.
ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು.
ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ
ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು.
• ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
• ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ
35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣವನ್ನು ಸ್ಥಾಪಿಸಲಾಗುವುದು.
• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ಼್ ಮಾಡಲಾಗುವುದು.
• ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ
Bio CNG Plant ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
• ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು
PPP ಮಾದರಿಯಲ್ಲಿ ಸ್ಥಾಪಿಸಲು ಒತ್ತು ನೀಡಲಾಗುವುದು.
ಎ.ಪಿ.ಎಂ.ಸಿ ಗಳನ್ನು ಬಲಪಡಿಸುವ ಮೂಲಕ ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಈ ಕೆಳಕಂಡ ಕ್ರಮಗಳನ್ನು ಪ್ರಸ್ತಾಪಿಸಿದೆ;
• ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲು ಕ್ರಮವಹಿಸಲಾಗುವುದು.
• ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು.
• ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು.
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ. ಗಳ ಮೂಲಕ ಸ್ಥಾಪಿಸಲಾಗುವುದು.
ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದ್ದು, ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.
ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ