
ಪ್ರಗತಿವಾಹಿನಿ ಸುದ್ದಿ: ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಸಿನಿಮಾ ಟಿಕೆಟ್ ದರ ಗರಿಷ್ಠ 200 ರೂಪಾಯಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಎಲ್ಲಾ ಭಾಷೆತ ಚಿತ್ರಗಳ ಪ್ರದರ್ಶನಗಳಿಗೂ ತೆರಿಗೆ ಹೊರತುಪಡಿಸಿ ಟಿಕೆಟ್ ದರ ಗರಿಷ್ಠ 200 ರೂಪಾಯಿ ಮೀರದಂತೆ ಏಕರೂಪದರ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಫ್ಲೆಕ್ಸ್ ಅಸೋಸ್ಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ ಟೈನ್ ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್ ತಯಾರಕರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ರವಿ ಹೊಸಮನಿ ಅವರಿದ್ದ ಪೀಠ, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದು, ವಿಚಾರಣೆ ಮುಂದೂಡಿದೆ.