Belagavi NewsBelgaum NewsKannada NewsKarnataka NewsPolitics

*ಜನರ ಕಲ್ಯಾಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಜಾರಿ: ಎಸ್.ಆರ್. ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಳವರ್ಗದ ಜನರ ಆರ್ಥಿಕ ಪರಿಸ್ಥಿತಿಯನ್ನು ಮೇಲ್ಮಟ್ಟಕ್ಕೆತ್ತುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ಜನರ ಕಲ್ಯಾಣಕ್ಕೆ ಶ್ರಮಿಸುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ (ಬ್ಯಾಡಗಿ) ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಸರೆನ್ಸ್ ಸಭಾಂಗಣದಲ್ಲಿ ಗುರುವಾರ (ನ.20) ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮಾನ್ಯ ಸಿದ್ದರಾಮ್ಯವರ ಸರ್ಕಾರ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು. ಚುನಾವಣೆಗೆ ಮುಂಚೆ ಪಂಚ ಗ್ಯಾರಂಟಿ ಕುರಿತು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮಿತಿಗೆ ಪ್ರತಿ ತಾಲೂಕಿನಿಂದ ಒಬ್ಬ ಸದಸ್ಯರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದಕ್ಕೆ ಎಲ್ಲ ಸದಸ್ಯರು ಗ್ಯಾರಂಟಿ ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡು ಅರ್ಹರಿಗೆ ಸುಲಭವಾಗಿ ಗ್ಯಾರಂಟಿ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Home add -Advt

ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ, ಅನ್ನಭಾಗ್ಯ ಯೋಜನೆಡಿ ಉಚಿತ ಅಕ್ಕಿ, ಯುವನಿಧಿ ಯೋಜನೆಯಡಿ ಪದವೀಧರರಿಗೆ ನಿರುದ್ಯೋಗ ಭತ್ಯೆ, ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ಮಾಹೆ 2 ಸಾವಿರ, ಗೃಹಜ್ಯೋತಿ ಯೋಜಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ.

ಪ್ರತಿ ತಾಲೂಕು ಸದಸ್ಯರು 2 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಸಭೆಗಳನ್ನು ನಡೆಸಿ ಯೋಜನೆಯಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳಿಗೆ ಸೇರ್ಪಡೆಗೊಳಿಸಬೇಕು.

ಗ್ಯಾರಂಟಿ ಯೋಜನೆಗಳ ಮೂಲಕ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಮಕ್ಕಳಿಗೆ ಶಿಕ್ಷಣ ಸೇರಿದಂತೆ ಆರ್ಥಿಕ ಹೊರೆ ಕೂಡ ಕಡಿಮೆಯಾಗಿದೆ. ಇಡೀ ದೇಶದಲ್ಲೇ ಕರ್ನಾಟಕ ರಾಜ್ಯ ತೆರಿಗೆ ಪಾವತಿಸುವಲ್ಲಿ 2ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಕೆಲವು ಫಲಾನುಭವಿಗಳು ಜಿ.ಎಸ್.ಟಿ ಪಾವತಿಸದೇ ಹೋದರು ಅವರ ಹೆಸರಿನಲ್ಲಿ ಜಿ.ಎಸ್.ಟಿ ನೋಂದಣಿಯಾದ ಕಾರಣ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಅಂಥವುಗಳನ್ನು ಗುರುತಿಸಿ ಜಿ.ಎಸ್.ಟಿ ನೋಂದಣಿ ರದ್ದು ಮಾಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್.ಆ‌ರ್. ಪಾಟೀಲ (ಬ್ಯಾಡಗಿ) ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ ಮರಣ ಹೊಂದಿರುವ ಫಲಾನುಭವಿಗಳ ಹೆಸರಲ್ಲಿ ಈಗಾಗಲೇ ಬಂದಿರುವ ಸರ್ಕಾರದ ಹಣವನ್ನು ಅವಲಂಬಿತರು ದುರುಪಯೋಗ ಪಡಿಸಿಕೊಳ್ಳುತ್ತಿರುವ ದೂರುಗಳು ಕೇಳಿ ಬರುತ್ತಿದ್ದು, ಅಂತಹ ಫಲಾನುಭವಿಗಳ ಮಾಹಿತಿ ಪಡೆದು ಪಟ್ಟಿ ತಯಾರಿಸಿ ಕೂಡಲೇ ಬ್ಯಾಂಕ್ ಖಾತೆಗೆ ಹಣ ಜಮೆಯಾಗದಂತೆ ಡಿಲಿಂಕ್ ಮಾಡಲು ಅವಲಂಬಿತರಿಗೆ ಸೂಚನೆ ನೀಡಬೇಕು ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಕಾರ್ಯ ನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ ಸೇರಿಯಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button