*ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ*: *ಮೂವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ರೈತರು ಮತ್ತು ಅರಣ್ಯ ಇಲಾಖೆ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅರಣ್ಯ ಇಲಾಖೆಯ ಗಿಡ ನೆಡುವ ಕಾರ್ಯಕ್ಕೆ ಅಡ್ಡಿಪಡಿಸಿದ ವೇಳೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು ಘಟನೆಯಲ್ಲಿ ಮೂವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮಶೇಖರ್, ಜಮೀರ್ ಮತ್ತು ನವೀನ್ ಎಂಬ ಮೂವರು ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಲ್ಲಂಪಲ್ಲಿ ಗ್ರಾಮದ ಸರ್ವೆ ನಂಬರ್ 35ರಲ್ಲಿ ಅರಣ್ಯ ಇಲಾಖೆಗೆ ಸೇರಿದ 296 ಎಕರೆ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಚಲಪತಿ ಎಂಬಾತ ಅರಣ್ಯ ಸಿಬ್ಬಂದಿಯ ಕಾರ್ಯಕ್ಕೆ ಅಡ್ಡಿಪಡಿಸಿ, ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಚ್ಚು ಪಡೆಯಲು ಮುಂದಾದಾಗ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಮೂವರ ಕೈಗಳಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ತಕ್ಷಣ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪದ ಮೇಲೆ ಚಲಪತಿಯನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಅರಣ್ಯ ಇಲಾಖೆ ಸಿಬ್ಬಂದಿಯ ಸುರಕ್ಷತೆ ಕುರಿತು ಪ್ರಶ್ನೆಗಳು ಎದ್ದಿವೆ.
ಕಳೆದ ಒಂದು ವಾರದಿಂದ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಉಪ್ಪರಪಲ್ಲಿ, ಮಲ್ಲಂಪಲ್ಲಿ ಹಾಗೂ ಎ.ಎಂ. ಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅರಣ್ಯ ಇಲಾಖೆ ಗಿಡ ನೆಡುವ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಗಳಿಗೆ ಕೆಲ ರೈತರು ಹಾಗೂ ಒತ್ತುವರಿದಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಕೆಲವು ಕಡೆ ಪೊಲೀಸರು ನೆರವು ನೀಡಿದ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸುತ್ತಿದೆ.
ಇನ್ನು ಘಟನಾ ಸ್ಥಳಕ್ಕೆ ಸಿಪಿಎಂ, ದಲಿತ ಸಂಘಟನೆ ಹಾಗೂ ರೈತ ಸಂಘಟನೆಗಳ ಮುಖಂಡರು ಭೇಟಿ ನೀಡಿ ಅರಣ್ಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಒತ್ತುವರಿ ತೆರವು ಹೆಸರಿನಲ್ಲಿ ರೈತರನ್ನು ಅಕ್ರಮವಾಗಿ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಲವು ವರ್ಷಗಳಿಂದ ರೈತರು ಈ ಪ್ರದೇಶಗಳಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಾಗಿ ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಮುಖಂಡರು ದೂರಿದ್ದಾರೆ.
ಸರ್ಕಾರದ ಆದೇಶ ಹಾಗೂ ಜಂಟಿ ಸರ್ವೆ ನಡೆಯುವವರೆಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಒಂದೆಡೆ ಅರಣ್ಯ ಇಲಾಖೆ ತನ್ನ ಜಾಗದಲ್ಲಿ ಗಿಡ ನೆಡುವ ಮತ್ತು ಒತ್ತುವರಿ ತೆರವು ಮಾಡುವ ಕಾರ್ಯಕ್ಕೆ ಮುಂದಾಗಿದ್ದರೆ, ಮತ್ತೊಂದೆಡೆ ರೈತರು ಮತ್ತು ಸಂಘಟನೆಗಳು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಈ ಸಂಘರ್ಷಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



