Kannada NewsKarnataka NewsLatestPolitics

*ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ನಿಧನರಾದರು.

ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರ ಅವಧಿಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ :  ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ, ರಾಜ್ಯಪಾಲರಾಗಿ ಅವರು ಈ ನಾಡಿಗೆ ಸಲ್ಲಿಸಿದ ಸೇವೆ  ಅನುಪಮವಾಗಿದೆ.  ನನ್ನ ರಾಜಕೀಯ ಜೀವನದಲ್ಲಿ ಅವರು ಗುರುವಿನಂತೆ ಇದ್ದು ಮಾರ್ಗದರ್ಶನ ನೀಡುತ್ತಿದ್ದರು. ಅವರ ಅವಧಿಯಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿನ ಸಾಧನೆಯಿಂದಾಗಿ ಕರ್ನಾಟಕ ವಿಶ್ವದಲ್ಲೇ ಹೆಸರಾಗುವಂತೆ ಮಾಡಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ. 

ಅಜಾತಶತ್ರುಗಳಾಗಿದ್ದ ಅವರು, ಕಿರಿಯ ರಾಜಕಾರಣಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಡೆ ನುಡಿ, ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗದ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button