ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವೆಡೆ ಅರೇಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು, ನಾಳೆ ಹಾಗೂ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಬೆಂಗಳೂರಿನಲ್ಲಿ ನಿರಂತರ ಮಳೆ ಹಿನ್ನೆಲೆ ಕೆಲ ಭಾಗಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ಜೀವನ ಕೂಡ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ ಮತ್ತೆ ನಾಲ್ಕು ದಿನಗಳ ಕಾಲ ಮಳೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.
ಇನ್ನು ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಿದ್ದು, ನಾಳೆಯಿಂದ ಅಂದರೆ ಅ.24 ರಿಂದ ಅ. 25ರ ವರೆಗೆ ಕೆಲವಡೆ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದು ಹಾಗೂ ನಾಳೆ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ