
ಪ್ರಗತಿವಾಹಿನಿ ಸುದ್ದಿ: ಭೀಕರ ಅಗ್ನಿ ಅನಾಹುತ ಸಂಭವಿಸಿ ನಾಲ್ಕು ಗೋದಾಮುಗಳು ಸುಟ್ಟು ಕರಕಲಾಗಿದೆ.
ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿರೋ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಗೋಡೌನ್ ನಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಎಲ್ಲೆಡೆ ವ್ಯಾಪಿಸಿದ ಪರಿಣಾಮ ಎಲ್ಲವೂ ಬೆಂಕಿಗಾಹುತಿಯಾಗಿದೆ.
ಬೆಂಕಿ ಆವರಿಸಿದ ಪರಿಣಾಮ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟು ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಅದೃಷ್ಟವಶಾತ್ ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದೆ ಎಂದು ಮಾಲೀಕರು ಹೇಳಿದ್ದಾರೆ.
ಕುಡಿದ ಮತ್ತಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಬಂಧ ಮೈಸೂರಿನ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



