*ಗ್ಯಾಸ್ ಸಿಲಿಂಡರ್ ಸ್ಫೋಟ*: *ತಾಯಿ, 3 ವರ್ಷದ ಮಗು ಸಾವು, ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಹಾಗೂ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದರು.
ರಾಯಚೂರು ಮೂಲದ ಕರಿಲಿಂಗಪ್ಪ ಕುಟುಂಬ ಕಳೆದ 25 ವರ್ಷಗಳಿಂದ ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿ ವಾಸವಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬ ಬಾಡಿಗೆ ಮನೆಯಲ್ಲಿ ನೆಲೆಸಿತ್ತು.
ಮಂಗಳವಾರ ಬೆಳಗ್ಗೆ ಸುಮಾರು 6.20ರ ವೇಳೆಗೆ ಮನೆಯ ಬಾಗಿಲು ತೆರೆದು ಅಡುಗೆ ಮಾಡಲು ಸ್ಟೌವ್ ಹಚ್ಚಿದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಕಳೆದ ಮೂರು ದಿನಗಳಿಂದ ಸಿಲಿಂಡರ್ನಲ್ಲಿ ಗ್ಯಾಸ್ ಲೀಕೇಜ್ ಸಮಸ್ಯೆ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಫೋಟದ ತೀವ್ರತೆಗೆ ಕರಿಲಿಂಗಪ್ಪ, ಪತ್ನಿ ಲಕ್ಷ್ಮಮ್ಮ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಲಕ್ಷ್ಮಮ್ಮ ಅವರಿಗೆ ಸುಮಾರು ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದರೆ, ಕರಿಲಿಂಗಪ್ಪ ಅವರಿಗೆ ಶೇ.45ರಷ್ಟು ಸುಟ್ಟ ಗಾಯಗಳಾಗಿತ್ತು. ಮಕ್ಕಳಿಗೂ ಗಂಭೀರ ಸುಟ್ಟ ಗಾಯಗಳಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಮ್ಮ ಹಾಗೂ ಮೂರು ವರ್ಷದ ಅವಳಿ ಮಕ್ಕಳಲ್ಲಿ ಒಂದು ಮಗು ಮೃತಪಟ್ಟಿದೆ. ಇದರಿಂದ ಕುಟುಂಬದಲ್ಲಿ ದುರಂತದ ಛಾಯೆ ಆವರಿಸಿದೆ. 11 ವರ್ಷದ ಚೈತ್ರಾ, 9 ವರ್ಷದ ಬಸವ ಹಾಗೂ ಮತ್ತೊಂದು ಮೂರು ವರ್ಷದ ಮಗು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಯ ನಿಖರ ಕಾರಣದ ಕುರಿತು ತನಿಖೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



