ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರಕಾರಿ ಅಧಿಕಾರಿ, ನೌಕರರ ಸಾಮಾನ್ಯ ವರ್ಗಾವಣೆ ಮಾರ್ಗಸೂಚಿ ಹೊರಬಿದ್ದಿದೆ.
ಮಂಗಳವಾರ ಸರಕಾರ ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 1ರಿಂದ 15ರ ವರೆಗೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆಯಾ ಇಲಾಖೆಯ ಸಚಿವರಿಗೆ ವರ್ಗಾವಣೆಯ ಅಧಿಕಾರ ನೀಡಲಾಗಿದ್ದು, ಶೇ.6ಕ್ಕೆ ಮೀರದಂತೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.
2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 7 ಸೇನೌವ 2023, ಬೆಂಗಳೂರು, DO: 30.05.2023.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು, 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರಷ್ಟನ್ನು ಮೀರದಂತೆ ದಿನಾಂಕ: 01.06.2023 ರಿಂದ ದಿನಾಂಕ: 15.06.2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ