*ರಾಹುಲ್ ಗಾಂಧಿಗೆ ಮದುವೆ ಮಾಡಿಸಿ*: *ಸೋನಿಯಾ ಗಾಂಧಿಗೆ ಛಲವಾದಿ ನಾರಾಯಣಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಮದುವೆ ಮಾಡಿಸಿ ಎಂದು ಅವರ ತಾಯಿ ಸೋನಿಯಾ ಗಾಂಧಿಗೆ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಎಸ್‌ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ತೀವ್ರವಾಗಿ ತಲೆಕೆಡಿಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಎಸ್‌ಐಆರ್ ಜಾರಿಯಾದ ಬಳಿಕ ಗೆಲುವು ಸುಲಭವಾಗಿದೆ ಎಂದು ಕೇರಳದಲ್ಲಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಇದೇ ವೇಳೆ ರಾಹುಲ್ ಗಾಂಧಿ ಅವರು ಎಸ್‌ಐಆರ್ ವಿರುದ್ಧ ಮಾಡುತ್ತಿರುವ ಟೀಕೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದರು. ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನೂ ಅವರು ವಿರೋಧಿಸಿದರು.
ಎಸ್‌ಐಆರ್‌ನಿಂದ ಮತಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಅವರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರು, ಸ್ಥಳಾಂತರಗೊಂಡವರು ಹಾಗೂ ಅಗತ್ಯ ದಾಖಲೆಗಳಿಲ್ಲದವರ ಹೆಸರುಗಳನ್ನು ಪರಿಶೀಲನೆಯ ಬಳಿಕ ತೆಗೆದುಹಾಕಲಾಗುತ್ತಿದೆ ಎಂದು ಹೇಳಿದರು. ಮತಪಟ್ಟಿಯಿಂದ ಹೆಸರು ತೆಗೆದಿದ್ದರೆ ಅದನ್ನು ಮರುಸೇರ್ಪಡೆಗೊಳಿಸಲು ಅವಕಾಶವಿದೆ ಎಂದ ಅವರು, ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಇವಿಎಂ, ಚುನಾವಣಾ ಆಯೋಗ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ರಾಹುಲ್ ಗಾಂಧಿ ಟೀಕೆ ಮಾಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಚುನಾವಣೆ ಸೋತಾಗ ಮಾತ್ರ ಇವಿಎಂ ಅಥವಾ ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಸರಿಯಲ್ಲ ಎಂದ ಅವರು, ಕಾಂಗ್ರೆಸ್ ತನ್ನ ರಾಜಕೀಯ ವೈಫಲ್ಯಕ್ಕೆ ಇತರರನ್ನು ಹೊಣೆ ಮಾಡುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್‌ನ ರಾಜಕೀಯ ನಡೆಗೆ ಉತ್ತರ ನೀಡಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂಬ ಆಶಯ ಹೊಂದಿದ್ದರೂ, ಪ್ರಧಾನಿ ಸ್ಥಾನ ಜನರ ಮತದಾನದ ಮೂಲಕವೇ ನಿರ್ಧಾರವಾಗುತ್ತದೆ ಎಂದು ಅವರು ಹೇಳಿದರು.
*ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್ ಬರ್ಬರ ಹತ್ಯೆ*: *7 ಮಂದಿಯ ಗ್ಯಾಂಗ್‌ನಿಂದ ಅಟ್ಯಾಕ್* – Pragati Vahini
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




